ಸಿಎಂ ಭರವಸೆ: ಪಂಚಮಸಾಲಿ `2ಎ' ಮೀಸಲಾತಿ ಹೋರಾಟ ಮುಂದೂಡಿಕೆ

ಬೆಂಗಳೂರು, ಅ. 1: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಹಿಂ.ವರ್ಗಗಳ ಪ್ರವರ್ಗ `2ಎ' ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಹೋರಾಟಕ್ಕೆ ಮುಂದಾಗಿದ್ದ ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮನವೊಲಿಸುವಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಯಶಸ್ವಿಯಾಗಿದ್ದು, ಶ್ರೀಗಳು ತಮ್ಮ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.
ಶುಕ್ರವಾರ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದ ಮುಖಂಡರನ್ನು ಆಹ್ವಾನಿಸಿದ ಬಸವರಾಜ ಬೊಮ್ಮಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸುದೀರ್ಘ ಸಮಾಲೋಚನೆ ನಡೆಸಿ, ಮೀಸಲಾತಿ ಭರವಸೆ ನೀಡಿದ್ದು, ಹೋರಾಟವನ್ನು ಕೈಬಿಡಲು ಮನವಿ ಮಾಡಿದ ಹಿನ್ನೆಲೆಯಲ್ಲಿ ಪಂಚಮಸಾಲಿ ಮೀಸಲಾತಿ ಚಳವಳಿಯನ್ನು ಶ್ರೀಗಳು ಮುಂದೂಡಿದ್ದಾರೆ.
ಸಿಎಂ ಭೇಟಿ ಬಳಿಕ ಮಾತನಾಡಿದ ಜಯಮೃತ್ಯುಂಜಯ ಸ್ವಾಮಿ, `ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವ ಸಂಬಂಧ ಸಿಎಂ ಭರವಸೆ ನೀಡಿದ್ದು, ಅವರ ಮೇಲೆ ವಿಶ್ವಾಸವಿರಿಸಿ ಕಾದು ನೋಡುವ ನಿರ್ಧಾರಕ್ಕೆ ಬರಲಾಯಿತು. ಅಲ್ಲದೆ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡುವ ಬಗ್ಗೆಯೂ ನಿರ್ಣಯ ಕೈಗೊಳ್ಳಲಾಗಿದೆ' ಎಂದು ಸ್ಪಷ್ಟಪಡಿಸಿದರು.
`ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ಸತ್ಯಾಗ್ರಹದ ವೇಳೆ ಮುಖ್ಯಮಂತ್ರಿ ಹಾಗೂ ಸ್ಪೀಕರ್ ಅವರು ಮನವಿ ಮಾಡಿದ್ದರು. ಆರು ತಿಂಗಳಲ್ಲಿ ಮೀಸಲಾತಿ ಕಲ್ಪಿಸದಿದ್ದರೆ ಅ.1ರಂದು ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದೆವು. ನಿನ್ನೆ ದಾವಣಗೆರೆಯ ಸಮಾವೇಶ ನೋಡಿ ಸರಕಾರ ಎಚ್ಚೆತ್ತಿದ್ದು, ಸಿಎಂ ಖುದ್ದು ಆಹ್ವಾನಿಸಿದ್ದರು. ಅಲ್ಲದೆ ಮೀಸಲಾತಿ ಭರವಸೆಯನ್ನು ನೀಡಿದ್ದಾರೆ.
ಮೀಸಲಾತಿ ಕಲ್ಪಿಸುವ ಸಂಬಂಧ ಕೇಂದ್ರದ ವ್ಯಾಪ್ತಿಯಲ್ಲಿದ್ದ ಅಧಿಕಾರ ರಾಜ್ಯಕ್ಕೆ ನೀಡಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ವರದಿ ನೀಡಿದ ಬಳಿಕ ಮೀಸಲಾತಿ ಕಲ್ಪಿಸುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು. ಹೀಗಾಗಿ ಕಾಲಾವಕಾಶ ನೀಡಲು ಕೋರಿದ್ದಾರೆ. ಆ ಹಿನ್ನೆಲೆಯಲ್ಲಿ ಸತ್ಯಾಗ್ರಹ ಮುಂದೂಡುತ್ತಿದ್ದೇವೆ ಎಂದು ಶ್ರೀಗಳು ತಿಳಿಸಿದರು.
ರಾಜ್ಯ ಹಿಂದುಳಿದ ವರ್ಗದ ಆಯೋಗದ ವರದಿ ಬಂದ ಮೂರು ತಿಂಗಳೊಳಗೆ ಮೀಸಲಾತಿ ಕಲ್ಪಿಸಬೇಕು. ಒಂದು ವೇಳೆ 3 ತಿಂಗಳ ಒಳಗೆ ಸಮುದಾಯಕ್ಕೆ ಮೀಸಲಾತಿ ಕಲ್ಪಿಸದಿದ್ದರೆ ಬೆಂಗಳೂರಿನಲ್ಲಿ ಮತ್ತೆ ಸತ್ಯಾಗ್ರಹ ಆರಂಭಿಸಲಾಗುವುದು. ಹಳ್ಳಿ ಮತ್ತು ತಾಲೂಕು ಮಟ್ಟದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಸ್ವಾಮೀಜಿ ಸ್ಪಷ್ಟಣೆ ನೀಡಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿ ಮುಖಂಡ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
`ಕೇಂದ್ರ ಸರಕಾರ ಓಬಿಸಿ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯ ಸರಕಾರಗಳಿಗೆ ನೀಡಿದ್ದು, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಸಂಬಂಧ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ವರದಿ ನೀಡಿದ ಕೂಡಲೇ ಮೀಸಲಾತಿ ಒದಗಿಸಲು ಸರಕಾರ ಕ್ರಮ ವಹಿಸಲಿದೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ಕೈಗೊಳ್ಳಲು ಉದ್ದೇಶಿಸಿದ್ದ ಸತ್ಯಾಗ್ರಹ ಕೈಬಿಟ್ಟಿರುವುದು ಒಳ್ಳೆಯ ಬೆಳವಣಿಗೆ'
-ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ
.jpg)







