ಖಾದಿ, ಗ್ರಾಮೋದ್ಯೋಗ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು, ಅ.2: ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಇಂದು ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಗಾಂಧಿ ಸೇವಾ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡುತ್ತಿದ್ದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣ ಪ್ರಗತಿಯಲ್ಲಿದೆ. ದಾವಣಗೆರೆಯ ಗಾಂಧೀ ಭವನ ಇತ್ತೀಚೆಗೆ ಉದ್ಘಾಟನೆಯಾಗಿದ್ದು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಉದ್ಘಾಟನೆಗೆ ಸಜ್ಜುಗೊಂಡಿವೆ. ಉಳಿದ ಜಿಲ್ಲೆಗಳ ಗಾಂಧಿ ಭವನಗಳೂ ಶೀಘ್ರವೇ ಸಿದ್ಧವಾಗಲಿವೆ ಎಂದು ನುಡಿದರು.
ಗಾಂಧೀಜಿ ಒಬ್ಬ ವ್ಯಕ್ತಿಯಲ್ಲ. ಅವರು ಸ್ವಾತಂತ್ರ್ಯ ಹೋರಾಟಗಾರರಷ್ಟೇ ಅಲ್ಲ; ನೈತಿಕ ಭಾರತವನ್ನು ಕಟ್ಟುವ ಶಕ್ತಿ ಎಂದು ಮುಖ್ಯಮಂತ್ರಿ ತಿಳಿಸಿದರು.
ನಾವು ಇಂದು ದೇಶಕ್ಕಾಗಿ ದುಡಿಯುವ ಮೂಲಕ ವಿಶ್ವದಲ್ಲಿ ಅಗ್ರ ಸ್ಥಾನ ಪಡೆಯಲು ಶ್ರಮಿಸಬೇಕು. ಇಂದಿನ ಸಮಾಜದಲ್ಲಿ ನಾವು ನಾಗರಿಕ ಜವಾಬ್ದಾರಿಯ ಕೊರತೆಯನ್ನು ಕಾಣುತ್ತೇವೆ. ಕರ್ತವ್ಯ ಪ್ರಜ್ಞೆ ಮೂಡಿಸಿಕೊಂಡು ಕೆಲಸ ಮಾಡಿದರೆ ಯಾವ ಸವಾಲೂ ದೊಡ್ಡದಲ್ಲ. ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡಿದರೆ, ಅದುವೇ ಗಾಂಧೀಜಿಯವರಿಗೆ ನಾವು ನೀಡುವ ಗೌರವ ಎಂದು ಮುಖ್ಯಮಂತ್ರಿಯವರು ತಿಳಿಸಿದರು.
ಮಾಜಿ ಸಚಿವ ಎಚ್.ಕೆ. ಪಾಟೀಲ, ನ್ಯಾ. ಅಶೋಕ ಬಿ. ಹಿಂಚಗೇರಿ ಮಾತನಾಡಿದರು. ಸಚಿವರಾದ ಗೋವಿಂದ ಎಂ. ಕಾರಜೋಳ, ಹಾಲಪ್ಪ ಆಚಾರ್, ಸಂಸದರಾದ ಶಿವಕುಮಾರ್ ಉದಾಸಿ, ಡಾ.ಎಲ್. ಹನುಮಂತಯ್ಯ ಮತ್ತು ಇತರರು ಉಪಸ್ಥಿತರಿದ್ದರು.







