ಕೇಂದ್ರ ಸಚಿವ ಅಜಯ್ ಮಿಶ್ರಾ ಉಚ್ಚಾಟನೆಗೆ ಆಗ್ರಹಿಸಿ ರಾಷ್ಟ್ರಪತಿಗೆ ಎಸ್‌ಕೆಎಂ ಪತ್ರ

ಹೊಸದಿಲ್ಲಿ, ಅ.2: ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದ ಘಟನೆಗೆ ಸಂಬಂಧಿಸಿ ಕೇಂದ್ರ ಸಹಾಯಕ ಗೃಹ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ಉಚ್ಚಾಟಿಸಬೇಕೆಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಸಹಾಯಕ ಗೃಹ ಸಚಿವ ಅಜಯ್ ಮಿಶ್ರಾ ತೇನಿ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಹಿಂಸಾಚಾರವನ್ನು ಪ್ರಚೋದಿಸಿದ ಹಾಗೂ ಕೋಮುದ್ವೇಷವನ್ನು ಹರಡುತ್ತಿರುವುದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಅಜಯ್ ಮಿಶ್ರಾ ಅವರ ಪುತ್ರ ಆಶೀಷ್ ಮಿಶ್ರಾ ‘ಮೋನು’ ಹಾಗೂ ಅವರ ಗೂಂಡಾಗಳ ವಿರುದ್ಧ ತಕ್ಷಣವೇ ಭಾರತೀಯ ದಂಡಸಂಹಿತೆಯ ಸೆಕ್ಷನ್ 302 (ಕೊಲೆ)ರಡಿ ಪ್ರಕರಣ ದಾಖಲಿಸಬೇಕು ಹಾಗೂ ಬಂಧಿಸಬೇಕು’’ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡದಿಂದ ಘಟನೆಯ ಬಗ್ಗೆ ತನಿಖೆ ನಡೆಸುವಂತೆಯೂ ವಿವಿಧ ರೈತ ಒಕ್ಕೂಟಗಳ ಮಾತೃ ಸಂಘಟನೆಯಾದ ಎಸ್‌ಕೆಎಂ ಆಗ್ರಹಿಸಿದೆ.





