ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂದನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

ಮೈಸೂರು,ಅ.6: ಮೈಸೂರು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅವರು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ಹಿನ್ನಲೆಯಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂಧನ್ ವಿರುದ್ಧ ಖಾಸಗಿ ದೂರು ದಾಖಲಿಸಲು ಮೈಸೂರಿನ ಮೂರನೇ ಜೆಎಂಎಫ್‍ಸಿ ನ್ಯಾಯಾಲಯ ಆದೇಶ ನೀಡಿದೆ.
ಪ್ರೊ.ಕೆ.ಎಸ್.ರಂಗಪ್ಪ ಅವರು 2019-2020 ರಲ್ಲಿ ಮೈಸೂರು ವಿ.ವಿ. ಕುಲಪತಿಗಳಾಗಿದ್ದ ಅವಧಿಯಲ್ಲಿ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಸಮಾವೇಶದ ಅಧ್ಯಕ್ಷರಾಗಿ ಕಾರ್ಯಕ್ರಮ ಆಯೋಜಿಸಿದ್ದರು. ಈ ವೇಳೆ ಗೋ.ಮಧುಸೂಧನ್ ಅವರು ಅವರ ಮೇಲೆ ಸುಳ್ಳು ಆರೋಪ ಮಾಡಿ ಅಪಪ್ರಚಾರ ಮಾಡಿದ್ದಾರೆಂದು ಆರೋಪಿಸಿ ಪ್ರೊ.ಕೆ.ಎಸ್.ರಂಗಪ್ಪ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ಐಪಿಸಿ ಸೆಕ್ಷನ್ 499, 500, 501 ಸೆಕ್ಷನ್ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶ ನೀಡಿದೆ. ಹಾಗೆಯೇ ಸಮನ್ಸ್ ಜಾರಿಗೂ ನ್ಯಾಯಾಲಯ ಆದೇಶ ಹೊರಡಿಸಿದೆ.
ಇದೇ ವೇಳೆ ಮಾಧ್ಯಮ ಹೇಳಿಕೆ ನೀಡಿರುವ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಮಾತನಾಡಿ ವಿಧಾನ ಪರಿಷತ್ ಮಾಜಿ ಸದಸ್ಯ ಗೋಮಧುಸೂದನ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಗೌರವಾನ್ವಿತ ನ;ಯಾಯಾಲಯವು ಆದೇಶಿಸಿದೆ.
2020 ರ ಜನವರಿಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಸಮಾವೇಶದ ಅಧ್ಯಕ್ಷನಾಗಿದ್ದ ವೇಳೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆ ನಾನು ವೇದಿಕೆ ಹಂಚಿಕೊಳ್ಳದಂತೆ ಸಂಚು ರೂಪಿಸಿ ನನ್ನ ವಿರುದ್ಧ ಸುಳ್ಳು ಆರೋಪಗಳ ಮೂಲಕ ಗೋ.ಮಧುಸೂದನ್ ಅಪಪ್ರಚಾರ ಮಾಡಿದ್ದರು.
ಈ ಬಗ್ಗೆ ನಾನು ನ್ಯಾಯಲಯದ ಮೊರೆ ಹೋಗಿದ್ದೆ. ಇದೀಗ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂದನ್ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲು ಸೂಚನೆ ನೀಡಿದೆ. ಇದು ಸತ್ಯಕ್ಕೆ ದೊರೆ ಜಯವಾಗಿದೆ ಎಂದು ಹೇಳಿದ್ದಾರೆ.







