ಮಾನವೀಯ ಮೌಲ್ಯಗಳ ನೆಲೆಗಟ್ಟಿನಲ್ಲಿ ಹೊಸ ಶಿಕ್ಷಣ ನೀತಿ ಜಾರಿ : ಸಚಿವ ಬಿ.ಸಿ.ನಾಗೇಶ್
ಶಿಕ್ಷಕರೊಂದಿಗೆ ಸಂವಾದ ಕಾರ್ಯಕ್ರಮ

ಕುಂದಾಪುರ, ಅ.6: ಮಾನವೀಯ ಮೌಲ್ಯಗಳ ನೆಲೆಗಟ್ಟಿನ ಶಿಕ್ಷಣವನ್ನು ಮಕ್ಕಳಿಗೆ ನೀಡುವ ಉದ್ದೇಶದಿಂದ ದೇಶದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ. ಇದರಿಂದಾಗಿ ಮಕ್ಕಳಿಗೆ ಬುದ್ಧಿ ಅರಳಿಸುವ ಹಾಗೂ ಹೃದಯ ಮುಟ್ಟುವ ಶಿಕ್ಷಣ ದೊರೆಯಲಿದೆ. ಆದುದರಿಂದ ಈ ನೀತಿಯ ಸಮರ್ಪಕ ಅನುಷ್ಠಾನಕ್ಕೆ ಎಲ್ಲ ಶಿಕ್ಷಕರ ಸಹಕಾರ ನೀಡಬೇಕಾಗಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಶ್ರಯದಲ್ಲಿ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ಬುಧವಾರ ನಡೆದ ಶಿಕ್ಷಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಸ್ವಾತಂತ್ರ್ಯ ಪೂರ್ವದಲ್ಲಿಯೇ ಮೆಕಾಲೆ ಶಿಕ್ಷಣ ನೀತಿಯನ್ನು ಬದಲಾಯಿಸ ಬೇಕೆಂಬ ಕೂಗು ಕೇಳಿ ಬಂದಿತ್ತು. ಗಾಂಧೀಜಿ, ವಿವೇಕಾನಂದರು, ವಿನೋಬಾ ಬಾವೆ ಕೂಡ ದೇಶಕ್ಕೆ ಸ್ವತಂತ್ರ್ಯ ಶಿಕ್ಷಣ ವ್ಯವಸ್ಥೆ ಬೇಕೆಂದು ಪ್ರತಿಪಾದಿಸಿದ್ದರು. ಅದರ ರೂಪವೇ ಈ ಹೊಸ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ. ರಾಜೀವ ಗಾಂಧಿ ಶಿಕ್ಷಣ ಬದಲಾವಣೆಗೆ ಮನಸ್ಸು ಮಾಡಿದರೂ ಶಿಕ್ಷಣದ ದಾಸ್ಯದಿಂದ ಹೊರ ಬರಲಾಗಲಿಲ್ಲ. ದೇಶೀಯ ಶಿಕ್ಷಣ ಪದ್ಧತಿ ಜಾರಿ ಮೂಲಕ ಮಾನವೀಯ ಕೊಂಡಿಗಳ ಬೆಸೆವ ಕೆಲಸ ಆಗಬೇಕಾಗಿದೆ ಎಂದರು.
ಅಧ್ಯಕ್ಷತೆಯನ್ನು ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ವಹಿಸಿದ್ದರು. ಎಸೆಸೆಲ್ಸಿ ಪರೀಕ್ಷೆಯಲ್ಲಿ ಪೂರ್ಣಾಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಿಕ್ಷಕ ವರ್ಗದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿವಿಧ ಶಿಕ್ಷಕರ ಸಂಘಗಳ ವತಿಯಿಂದ ಸಚಿವರಿಗೆ ಮನವಿ ಸಲ್ಲಿಸಲಾಯಿತು. ವಿದ್ಯಾರ್ಥಿ ಗಳ ಪೋಷಕರು ಹಲವು ಬೇಡಿಕೆ ಈಡೇರಿೆಗೆ ಒತ್ತಾಯಿಸಿ ಅಹವಾಲು ಸಲ್ಲಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಡಯಟ್ ಪ್ರಾಂಶುಪಾಲ ವೇದಮೂರ್ತಿ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಂ. ಮುಂದಿನಮನಿ, ಸರಕಾರಿ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ, ಅಕ್ಷರ ದಾಸೋಹ ಅಧಿಕಾರಿ ನಾಗೇಂದ್ರಪ್ಪ ಮೊದಲಾ ದವರು ಉಪಸ್ಥಿತರಿದ್ದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿ ಕಾರಿ ಎಸ್.ಕೆ. ಪದ್ಮನಾಭ ಸ್ವಾಗತಿಸಿದರು. ಬೈಂದೂರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ ಮನವಿ ಮಂಡಿಸಿ ದರು. ಕಿಶೋರ್ ಕುಮಾರ್ ಹಕ್ಲಾಡಿ ಹಾಗೂ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು.







