ರಸಗೊಬ್ಬರ ಕೊರತೆ ನಿವಾರಣೆ: ಕೇಂದ್ರ ಸಚಿವರ ಭರವಸೆ

ಹೊಸದಿಲ್ಲಿ, ಅ.8: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೊಸದಿಲ್ಲಿಯಲ್ಲಿ ಆರೋಗ್ಯ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್‍ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿ, ರಬಿ ಹಂಗಾಮಿಗೆ ಸುಮಾರು 32 ಸಾವಿರ ಮೆಟ್ರಿಕ್ ಟನ್ ಡಿಎಪಿ ಹಾಗೂ ಸುಮಾರು 10 ಸಾವಿರ ಮೆಟ್ರಿಕ್ ಟನ್ ಎಂಓಪಿ ಕೊರತೆ ಇದ್ದು, ಇದನ್ನು ಒದಗಿಸುವಂತೆ ಮನವಿ ಮಾಡಲಾಯಿತು. ಇದನ್ನು ಒಂದು ವಾರದೊಳಗೆ ಒದಗಿಸುವುದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆ ಎಂದರು.
ರಾಜ್ಯದ ಲಸಿಕೆ ಅಭಿಯಾನದ ಕುರಿತು ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಳೆದ ಒಂದು ತಿಂಗಳಲ್ಲಿ 1.48 ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು, ಈ ಕುರಿತು ಅವರು ಸಂತೋಷ ವ್ಯಕ್ತಪಡಿಸಿದರು. ಈವರೆಗೆ ಶೇ.81 ರಷ್ಟು ಮೊದಲ ಡೋಸ್ ಹಾಗೂ ಶೇ.37 ರಷ್ಟು ಎರಡನೇ ಡೋಸ್ ನೀಡಲಾಗಿದೆ. 51 ಲಕ್ಷ ಡೋಸ್ ದಾಸ್ತಾನು ಲಭ್ಯವಿದ್ದು, ಎರಡನೇ ಡೋಸ್ ನೀಡಲು ಒತ್ತು ನೀಡಲಾಗುವುದು ಎಂದು ಅವರು ತಿಳಿಸಿದರು.
ಡಿಸೆಂಬರ್ ಅಂತ್ಯದೊಳಗೆ ಮೊದಲ ಡೋಸ್ 90 ಶೇಕಡಾ ಹಾಗೂ ಎರಡನೇ ಡೋಸ್ ಕನಿಷ್ಠ 70 ಶೇಕಡಾ ಕೊಡಬೇಕೆಂಬ ಗುರಿ ಇದೆ. ನಿಮ್ಹಾನ್ಸ್ ಘಟಿಕೋತ್ಸವಕ್ಕಾಗಿ ಸೋಮವಾರ ಕೇಂದ್ರ ಸಚಿವರು ಬೆಂಗಳೂರಿಗೆ ಆಗಮಿಸಲಿದ್ದು, ರಾಜ್ಯದ ಆರೋಗ್ಯ ಸೇವಾ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಿ, ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.







