ವಿಧಾನಸಭೆ ಉಪ ಚುನಾವಣೆ: ಒಟ್ಟು 57 ನಾಮಪತ್ರ ಸಲ್ಲಿಕೆ

ಬೆಂಗಳೂರು, ಅ.8: ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಒಟ್ಟು 37 ಅಭ್ಯರ್ಥಿಗಳು 57 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ಸಿಂದಗಿ ಕ್ಷೇತ್ರದಲ್ಲಿ 12 ಮಂದಿ ನಾಮಪತ್ರ ಸಲ್ಲಿಸಿದ್ದರೆ, ಹಾನಗಲ್‍ನಲ್ಲಿ 45 ಮಂದಿ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಎರಡು ನಾಮಪತ್ರ, ಕಾಂಗ್ರೆಸ್ ಅಭ್ಯರ್ಥಿ ಮೂರು ನಾಮಪತ್ರ ಹಾಗೂ ಜೆಡಿಎಸ್ ಅಭ್ಯರ್ಥಿ ಎರಡು ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಇದಲ್ಲದೆ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ, ರಾಷ್ಟ್ರೀಯ ಸಮಾಜ ಪಕ್ಷ ಮತ್ತು ಮೂವರು ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾಲ್ಕು ನಾಮಪತ್ರ, ಕಾಂಗ್ರೆಸ್ ಅಭ್ಯರ್ಥಿ ನಾಲ್ಕು ನಾಮಪತ್ರ, ಜೆಡಿಎಸ್ ಅಭ್ಯರ್ಥಿ ಎರಡು ನಾಮಪತ್ರ, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ ಎರಡು ನಾಮಪತ್ರ, ಲೋಕಶಕ್ತಿ ಪಕ್ಷದ ಅಭ್ಯರ್ಥಿ ಮೂರು ನಾಮಪತ್ರ, ಕನ್ನಡ ದೇಶದ ಪಕ್ಷದ ಒಂದು, ರೈತ ಭಾರತ ಪಕ್ಷದ ಅಭ್ಯರ್ಥಿ ಒಂದು ಹಾಗೂ 28 ಮಂದಿ ಪಕ್ಷೇತರು ನಾಮಪತ್ರವನ್ನು ಸಲ್ಲಿಸಿದ್ದಾರೆ. ಸೋಮವಾರ(ಅ.11) ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅ.13 ಕೊನೆಯ ದಿನವಾಗಿದೆ.







