ರಾಜ್ಯಾದ್ಯಂತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ

ಬೆಂಗಳೂರು, ಅ.11: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾದ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತು.
ರಾಜ್ಯ ರಾಜಧಾನಿ ಬೆಂಗಳೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಬಹುಭಾಗಗಳಲ್ಲಿ ಭಾರೀ ಮಳೆ ಸುರಿದಿದೆ.
ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ಜಮೀನು, ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸಾವಿರಾರು ಎಕರೆ ಬೆಳೆಗೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ ಕುಂಟೆ, ಜಲಾಶಯಗಳು ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶದ ಶಾಲೆಗಳಿಗೆ ನೀರು ನುಗ್ಗಿದೆ. ಹೊಲ ಗದ್ದೆಗಳಿಗೂ ನೀರು ನುಗ್ಗಿದ್ದು ಆಲೂಗಡ್ಡೆ, ಟೊಮೆಟೋ ಬೆಳೆಗಳಿಗೆ ಹಾನಿಯಾಗಿದೆ.
ಧಾರಾಕಾರ ಮಳೆ ಸುರಿದ ಜಿಲ್ಲೆಗಳಲ್ಲಿ ವಿದ್ಯುತ್ ಕಂಬಗಳು, ಮರಗಳು ನೆಲಕ್ಕುರುಳಿದ್ದು, ಜನರು ವಿದ್ಯುತ್ ಇಲ್ಲದೇ ಪರದಾಡಿದರು. ವಾಹನ ಸಂಚಾರಕ್ಕೂ ಅಡ್ಡಿ ಉಂಟಾಯಿತು.
ರಾಯಚೂರಿನಲ್ಲಿ ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಸೋಮವಾರ ಸುರಿದ ಮಳೆಗೆ ತಗ್ಗು ಪ್ರದೇಶದಲ್ಲಿರುವ ರಾಯಚೂರು ನಗರದ ನಾಲ್ಕಕ್ಕೂ ಅಧಿಕ ವಾರ್ಡ್‍ಗಳು ಜಲಾವೃತಗೊಂಡಿವೆ. ನಗರದ ಅಲ್ಲಲ್ಲಿ ಗಂಜಿ ಕೇಂದ್ರಗಳನ್ನು ತೆರೆದು ಸಂತ್ರಸ್ತರಿಗೆ ಉಪಾಹಾರ ವ್ಯವಸ್ಥೆ ಮಾಡಲಾಗಿದೆ.






.jpg)
.jpg)
.jpg)

