ಸಮುದ್ರ ತೀರದಲ್ಲಿ ವಾಣಿಜ್ಯ ಚಟುವಟಿಕೆ ನಿರ್ಬಂಧ ತೆರವಿಗೆ ಕ್ರಮ: ಸಿಎಂ ಬೊಮ್ಮಾಯಿ

ಉಡುಪಿ, ಅ.13: ರಾಜ್ಯದ ಕರಾವಳಿ ಜಿಲ್ಲೆಗಳ ಸಮುದ್ರ ತೀರದಿಂದ 500 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ವಾಣಿಜ್ಯ ಮತ್ತು ಆರ್ಥಿಕ ಚಟುವಟಿಕೆ ಗಳನ್ನು ನಡೆಸದಂತೆ ವಿಧಿಸಲಾಗಿರುವ ನಿರ್ಬಂಧವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಉಡುಪಿ ಗ್ರಾಮೀಣ ಬಂಟರ ಸಂಘದ ವತಿಯಿಂದ ಕಾಪು ತಾಲೂಕಿನ ಕುಂತಲ ನಗರದಲ್ಲಿರುವ ಕನ್ವೆನ್ಷನ್ ಸೆಂಟರ್ ಮತ್ತು ತರಬೇತಿ ಕೇಂದ್ರ ಕೇಂದ್ರದಲ್ಲಿ ಉದ್ಯಮಿಗಳೊಂದಿಗೆ ನಡೆದ ಚಾಯ್ ಪೆ ಚರ್ಚಾ ಕಾರ್ಯಕ್ರವುದಲ್ಲಿ ಅವರು ಮಾತನಾಡುತಿದ್ದರು.
ಕೇರಳ ಮತ್ತು ಗೋವಾ ರಾಜ್ಯಗಳಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳಲಾಗದೆ. ಆ ಮೂಲಕ ಹೆಚ್ಚಿನ ಆದಾಯವನ್ನು ಗಳಿಸಿಕೊಳ್ಳುತ್ತಿವೆ. ಆದರೆ ಕರ್ನಾಟಕದಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಎಷ್ಟು ಸದ್ಬಳಕೆ ಮಾಡಿಕೊಳ್ಳಬೇಕಿತ್ತೋ ಅಷ್ಟು ಆಗಿಲ್ಲ ಎಂದು ಅವರು ವಿಷಾದಿಸಿದರು.
ಸಮುದ್ರ ತೀರದಿಂದ 500ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಆರ್ಥಿಕ ಚಟುವಟಿಕೆಗಳು ನಡೆಸದಂತೆ ನಿರ್ಬಂಧ ಹಾಕಿರುವ ಕಾನೂನು ರಾಜ್ಯದಲ್ಲಿ ಜಾರಿ ಯಲ್ಲಿದೆ. ಇದರಿಂದ ಪ್ರವಾಸೋದ್ಯಮ ಉತ್ತೇಜನಕ್ಕೆ ಅಡ್ಡಿಯಾಗುತ್ತದೆ ಎಂಬ ಆರೋಪವೂ ಇದೆ. ಹೀಗಾಗಿ ಈ ಕಾನೂನನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ರಾಜ್ಯ ಸರಕಾರ ರೂಪಿಸುತ್ತಿರುವ ಪ್ರವಾಸೋದ್ಯಮ ನೀತಿಯಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು ನೀಡಲಾಗುವುದು. ಉದ್ಯೋಗ ಆಧಾರಿತ ಪ್ರೋತ್ಸಾಹ ನೀತಿಯನ್ನು ಜಾರಿಗೊಳಿಸಲು ಯುವ ಉದ್ಯಮಿಗಳಿಗೆ ಉದ್ಯಮ ಸ್ಥಾಪಿಸಲು ಪೂರಕವಾದ ವಾತಾವರಣ ಸೃಷ್ಟಿಸ ಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನಿಲ್ ಕುಮಾರ್, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.







