ಕನ್ನಡ ರಾಜ್ಯೋತ್ಸವ ಆಚರಣೆ ಅರ್ಥಪೂರ್ಣವಾಗಿರಲಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಅ.23: ಜಿಲ್ಲೆಯಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.
ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
28ಕ್ಕೆ ಕನ್ನಡ ಗೀತೆಗಳ ಗಾಯನ: ಅ.24ರಿಂದ 31ರವರೆಗೆ ಕೆಎಸ್ಸಾರ್ಟಿಸಿ ಮತ್ತು ಮೆಸ್ಕಾಂಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಅ.28 ರಂದು ಬೆಳಗ್ಗೆ 11 ಗಂಟೆಗೆ ಕನ್ನಡದ ಶ್ರೇಷ್ಠತೆಯನ್ನು ಸಾರುವ ‘ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಈ ಕನ್ನಡ ಗೀತೆಗಳನ್ನು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಹಾಡಲು ಯೋಜನೆ ರೂಪಿಸುವಂತೆ ಹಾಗೂ ಎಲ್ಲಾ ಶಾಲಾ, ಕಾಲೇಜು, ಹಾಸ್ಟೆಲ್‌ಗಳಲ್ಲಿ ಈ ಗೀತೆಗಳನ್ನು ಹಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅ.24ರಿಂದ 31ರವರೆಗೆ ಕೆಎಸ್ಸಾರ್ಟಿಸಿ ಮತ್ತು ಮೆಸ್ಕಾಂಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಅ.28 ರಂದು ಬೆಳಗ್ಗೆ 11 ಗಂಟೆಗೆ ಕನ್ನಡದ ಶ್ರೇಷ್ಠತೆಯನ್ನು ಸಾರುವ ‘ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಈ ಕನ್ನಡ ಗೀತೆಗಳನ್ನು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಹಾಡಲು ಯೋಜನೆ ರೂಪಿಸುವಂತೆ ಹಾಗೂ ಎಲ್ಲಾ ಶಾಲಾ, ಕಾಲೇಜು, ಹಾಸ್ಟೆಲ್‌ಗಳಲ್ಲಿ ಈ ಗೀತೆಗಳನ್ನು ಹಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಣಿಪಾಲ ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದಲ್ಲಿ ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಸಹ ಈ ಕಾರ್ಯಕ್ರಮ ಆಯೋಜನೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲೆಯ ಐತಿಹಾಸಿಕ ಪ್ರದೇಶಗಳಲ್ಲಿ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದ ಅವರು, ಕಾರ್ಕಳದ ಬಾಹುಬಲಿ ಬೆಟ್ಟ ಮತ್ತು ಬೈಂದೂರಿನ ಸೇನೇಶ್ವರ ದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ನವೆಂಬರ್ 1ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಅಚರಣೆ ನಡೆಯಲಿದ್ದು, ಕನ್ನಡ ತಾಯಿ ಭುವನೇಶ್ವರಿ ದೇವಿಗೆ ಪೂಜೆ ನಡೆಸಲಾಗುವುದು. ವಿವಿಧ ತಂಡಗಳಿಂದ ಪಥ ಸಂಚಲನ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡುವ ಕುರಿತಂತೆ ಆಯ್ಕೆ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದ ಜಿಲ್ಲಾಧಿಕಾರಿ, ರಾಜ್ಯೋತ್ಸವ ಆಚರಣೆ ಕುರಿತಂತೆ ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಿದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಪಂ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.







