ಕೆಎಸ್ಸಾರ್ಟಿಸಿಯಲ್ಲಿ ಕನ್ನಡ ಗೀತೆಗಳ ಕಲರವ

ಬೆಂಗಳೂರು, ಅ.28: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎಲ್ಲಾ ವಿಭಾಗೀಯ ಕಚೇರಿಗಳಲ್ಲಿ, ವಿಭಾಗೀಯ ಕಾರ್ಯಾಗಾರ ಹಾಗೂ ಕೇಂದ್ರ ಕಚೇರಿ ಬಸ್ ನಿಲ್ದಾಣಗಳಲ್ಲಿ "ಕನ್ನಡಕ್ಕಾಗಿ ನಾವು" ಅಭಿಯಾನದ ಅಂಗವಾಗಿ ಲಕ್ಷ ಕಂಠಗಳಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮವನ್ನು ಗುರುವಾರ 11:00 ಗಂಟೆಗೆ ಹಮ್ಮಿಕೊಳ್ಳಲಾಗಿತ್ತು. ನಿಗಮದ ಅಧಿಕಾರಿಗಳು ಮತ್ತು ನೌಕರರು ಮೊದಲಿಗೆ ನಾಡಗೀತೆ, ನಂತರ ‘ಬಾರಿಸು ಕನ್ನಡ ಡಿಂಡಿಮವ’, ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡುಗಳನ್ನು ಹಾಡಿದರು.
ಹಾಗೆಯೇ ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ನಾನು ಕನ್ನಡದಲ್ಲೇ ಮಾತನಾಡುತ್ತೇನೆ. ಕನ್ನಡದಲ್ಲೇ ಬರೆಯುತ್ತೇನೆ. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇನೆ ಎಂಬ ಪಣ ತೊಡುತ್ತೇನೆ. ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡ ಕಲಿಸುತ್ತೇನೆ. ಕನ್ನಡ ನಾಡು, ನುಡಿ, ಸಂಸ್ಕøತಿ ಹಾಗೂ ಪರಂಪರೆಯನ್ನು ಉಳಿಸಲು ಬದ್ಧನಾಗಿರುತ್ತೇನೆ ಎಂದು ಸಂಕಲ್ಪ ಮಾಡಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ, ಟಿ.ವೆಂಕಟೇಶ್, ಹಾಗೂ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.







