ರವಿವಾರ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ

ಬೆಂಗಳೂರು, ಅ. 29: ಕನ್ನಡದ ಚಿತ್ರನಟ ಪುನೀತ್ ರಾಜ್ ಕುಮಾರ್ ಅವರ ಅಂತಿಮ ಸಂಸ್ಕಾರವನ್ನು ನಗರದ ‘ಕಂಠೀರವ ಸ್ಟುಡಿಯೋ'ದಲ್ಲಿ ಅ.31ರಂದು( ರವಿವಾರ) ನೆರವೇರಿಸಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ಶುಕ್ರವಾರ ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಪುನೀತ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋ ಆವರಣದಲ್ಲಿನ ಡಾ.ರಾಜ್ ಕುಮಾರ್ ಪ್ರತಿಷ್ಟಾನದಲ್ಲಿನ ಡಾ.ರಾಜ್‍ಕುಮಾರ್ ಅವರ ಸಮಾಧಿ ಸಮೀಪದಲ್ಲಿ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳಲು ಸಿಎಂ ಸೂಚಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಡಾ.ರಾಜ್‍ಕುಮಾರ್ ಪ್ರತಿಷ್ಠಾನದ ಸ್ವಾಮ್ಯದಲ್ಲಿರುವ ಜಮೀನಿನಲ್ಲಿ ನಟ ಪುನೀತ್ ರಾಜ್‍ಕುಮಾರ್ ಅವರ ಅಂತ್ಯ ಸಂಸ್ಕಾರ ನೆರವೇರಿಸಲು ಸರಕಾರ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.
ಈ ಮಧ್ಯೆ ಅಮೇರಿಕಾ ದೇಶಕ್ಕೆ ವ್ಯಾಸಂಗಕ್ಕಾಗಿ ತೆರಳಿರುವ ಪುನೀತ್ ಅವರ ಹಿರಿಯ ಪುತ್ರಿ ಧೃತಿ ಅಲ್ಲಿಂದ (ಅ.31) ರವಿವಾರ ಆಗಮಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಶನಿವಾರ ಮತ್ತು ರವಿವಾರವು ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ಅಪ್ಪು ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಆ ಬಳಿಕ ಸಕಲ ಸರಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೇರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಟ ಪುನೀತ್ ರಾಜ್‍ಕುಮಾರ್ ಅವರ ನಿಧನಕ್ಕೆ ರಾಜ್ಯ ಸರಕಾರವು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ಕೋವಿಡ್ ಮಾರ್ಗಸೂಚಿ ಅನುಸರಿಸಿ ನೆರವೇರಿಸಲಾಗುವುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಶಿಷ್ಟಾಚಾರ) ಸರಕಾರದ ಉಪಕಾರ್ಯದರ್ಶಿ ವೀರಭದ್ರ ಹಂಚಿನಾಳ ಆದೇಶ ಹೊರಡಿಸಿದ್ದಾರೆ.
.jpg)







