ಉತ್ತರಪ್ರದೇಶ: ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ಸಿದ್ದಪಡಿಸಿದ ಕಾಂಗ್ರೆಸ್
ವರ್ಷಕ್ಕೆ 3 ಉಚಿತ ಎಲ್ ಪಿಜಿ ಸಿಲಿಂಡರ್, ಬಸ್ ನಲ್ಲಿ ಉಚಿತ ಪ್ರಯಾಣದ ಭರವಸೆ

Photo: ANI
ಹೊಸದಿಲ್ಲಿ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷವು ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ ಹಾಗೂ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವರ್ಷಕ್ಕೆ ಉಚಿತವಾಗಿ 3 ಎಲ್ಪಿಜಿ ಸಿಲಿಂಡರ್ ಹಾಗೂ ಸರಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಸೌಲಭ್ಯವನ್ನು ಕಲ್ಪಿಸುವುದಾಗಿ ಭರವಸೆ ನೀಡಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ಹೇಳಿದ್ದಾರೆ.
ಕಾಂಗ್ರೆಸ್ನ ಉತ್ತರ ಪ್ರದೇಶ ಉಸ್ತುವಾರಿಯೂ ಆಗಿರುವ ಪ್ರಿಯಾಂಕಾ ಗಾಂಧಿ ಅವರು ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡಾ 40 ರಷ್ಟು ಟಿಕೆಟ್ ನೀಡುವುದಾಗಿ ಕಳೆದ ತಿಂಗಳು ಘೋಷಿಸಿದ್ದರು, ಈ ನಿರ್ಧಾರವು ಮಹಿಳೆಯರನ್ನು "ಅಧಿಕಾರದಲ್ಲಿ ಪೂರ್ಣ ಪ್ರಮಾಣದ ಪಾಲುದಾರ"ರನ್ನಾಗಿ ಮಾಡುವ ಉದ್ದೇಶ ಹೊಂದಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.
"ಉತ್ತರ ಪ್ರದೇಶದ ನನ್ನ ಪ್ರೀತಿಯ ಸಹೋದರಿಯರೇ, ನಿಮ್ಮ ಪ್ರತಿದಿನದ ಜೀವನ ಹೋರಾಟಗಳಿಂದ ತುಂಬಿದೆ. ಇದನ್ನು ಅರ್ಥಮಾಡಿಕೊಂಡ ಕಾಂಗ್ರೆಸ್ ಪಕ್ಷವು ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ'' ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.





