ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕು: ಸಿದ್ದರಾಮಯ್ಯ

ಬೆಂಗಳೂರು: ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇಂದು ಗುಬ್ಬಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಖಾಸಗಿ ಹೈಟೆಕ್ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುನೀತ್ ಅವರಲ್ಲಿ ಅಪಾರವಾದ ಪ್ರತಿಭೆ ಇತ್ತು, ಹೀಗಾಗಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂದು ಅಭಿಪ್ರಾಯ ಪಟ್ಟರು.
ಪುನೀತ್ ರಾಜ್‍ಕುಮಾರ್ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕುಎಂದು ಅವರು ತಿಳಿಸಿದರು.
ಇದೇ ವೇಳೆ ತಾವು ಕೂಡ ಕೇಂದ್ರ, ರಾಜ್ಯ ಸರ್ಕಾರಕ್ಕೆ ಪತ್ರ ಬರೆದು, ಪ್ರಶಸ್ತಿ ನೀಡುವಂತೆ ಒತ್ತಾಯಿಸುವುದಾಗಿ ಹೇಳಿದರು.
ಪುನೀತ್ ಅವರು ಇನ್ನೂ ಎತ್ತರೆತ್ತರಕ್ಕೆ ಬೆಳೆಯುತ್ತಿದ್ದ ವಯಸ್ಸಿನಲ್ಲಿಯೇ ಅಕಾಲಿಕ ಮರಣಕ್ಕೆ ತುತ್ತಾಗಿರುವುದು ನೋವಿನ ಸಂಗತಿ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗದವರಿಗೆ, ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು.





