ಬೆಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು, ನ.13: ಬಿಟ್ ಕಾಯಿನ್ ಬಹುಕೋಟಿ ಹಗರಣ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದರು.
ಶನಿವಾರ ನಗರದ ಕಾಂಗ್ರೆಸ್ ಕಚೇರಿ ಮುಂಭಾಗ ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ನೇತೃತ್ವದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ಹಗರಣ ಸಂಬಂಧ ಉನ್ನತ ತನಿಖೆ ನಡೆಯಬೇಕೆಂದು ಪಟ್ಟು ಹಿಡಿದರು.
ಕೇಂದ್ರ ಹಾಗೂ ರಾಜ್ಯ ಸರಕಾರ ಹಾಗೂ ಬಿಜೆಪಿ ಮುಖಂಡರು ಬಿಟ್ ಕಾಯಿನ್ ಹಗರಣವನ್ನು ದಾರಿತಪ್ಪಿಸಿ ಅನವಶ್ಯಕವಾಗಿ ವಿರೋಧ ಪಕ್ಷದ ವಿರುದ್ಧ ಆಧಾರ ರಹಿತ ಆರೋಪ ಹೊರೆಸುವುದರ ಮೂಲಕ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕರು ರಕ್ಷಿಸಲು ಮುಂದಾಗಿರುವುದು ಈಗ ಬಹಿರಂಗವಾಗಿದೆ ಎಂದು ಪ್ರತಿಭಟನಾಕಾರರು ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಯನ್ನು ದೇಶದ ಹಾಗೂ ರಾಜ್ಯದ ಜನ ಗಮನಿಸಿದರೆ ಭ್ರಷ್ಟಾಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಯೇ ಪ್ರೇರೇಪಣೆ ಎಂಬುದು ಈಗ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಬಹಿರಂಗವಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಸವಾಲೆಸೆದು ಬಿಟ್ ಕಾಯಿನ್ ಹಗರಣವನ್ನು ಸರ್ವೋಚ್ಚ ನ್ಯಾಯಲಯದ ನ್ಯಾಯಮೂರ್ತಿಗಳಿಂದ ತನಿಖೆಗೆ ವಹಿಸಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಎಸ್.ಮನೋಹರ್, ಜಿ.ಜನಾರ್ದನ್ ವಿ.ಆನಂದ್ ಎಲ್.ಜಯಸಿಂಹ, ಪುಟ್ಟರಾಜು, ಪ್ರಕಾಶ್ ವೆಂಕಟೇಶ, ತೇಜೇಶ್ ಕುಮಾರ್ ಸೇರಿದಂತೆ ಪ್ರಮುಖರಿದ್ದರು.
.jpg)







