ಉಡುಪಿ ಜಿಲ್ಲಾಧಿಕಾರಿಯಿಂದ ಐಕ್ಯತಾ ಪ್ರಮಾಣ ವಚನ ಬೋಧನೆ

ಉಡುಪಿ, ನ.19: ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಇಂದು ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸಿದರು.
ದೇಶದ ಸ್ವಾತಂತ್ರ ಮತ್ತು ಐಕ್ಯತೆಯನ್ನು ಬಲಪಡಿಸಲು, ದೇಶದಲ್ಲಿ ಹಿಂಸಾಚಾರ ಮತ್ತು ಕೋಮುದ್ವೇಷವನ್ನು ತಡೆಗಟ್ಟಲು ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು ಆಚರಿಸಲಾಗುತ್ತಿದೆ ಎಂದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಸಪ್ತಾಹದ ಅಂಗವಾಗಿ ನ.19ರಿಂದ 25ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು
ಎಲ್ಲಾ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ತಮ್ಮ ಇಲಾಖೆಗಳಲ್ಲಿ ಐಕ್ಯತಾ ಪ್ರಮಾಣ ವಚನ ಸ್ವೀಕರಿಸುವಂತೆ ಮತ್ತು ದೇಶಕ್ಕಾಗಿ ಅರ್ಪಣಾ ಮನೋಭಾವ ದಿಂದ ಕರ್ತವ್ಯ ನಿರ್ವಹಿಸಬೇಕು ಹಾಗೂ ಸಾರ್ವಜನಿಕರು ಯಾವುದೇ ರೀತಿಯ ಭಿನ್ನಾಭಿಪ್ರಾಯ ಮತ್ತು ವಿವಾದಗಳನ್ನು ಶಾಂತ ರೀತಿಯಲ್ಲಿ ಸಂವಿಧಾನಾತ್ಮಕ ರೀತಿಯಲ್ಲಿ ಬಗೆಹರಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾಧಿಕಾರಿ ಕಚೇರಿಯ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.







