ಹುಣಸೋಡು ಸ್ಫೋಟ ಪ್ರಕರಣ: ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ; ಹೈಕೋರ್ಟ್‌ಗೆ ಸರಕಾರದ ಮಾಹಿತಿ

ಬೆಂಗಳೂರು, ನ.19: ಶಿವಮೊಗ್ಗ ಜಿಲ್ಲೆಯ ಹುಣಸೋಡು ಬಳಿ ನಡೆದಿದ್ದ ಸ್ಫೋಟದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗಿದೆ ಹಾಗೂ ಮೂವರು ಆರೋಪಿಗಳ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಅಕ್ರಮ ಕಲ್ಲುಕ್ವಾರಿ ಬಳಿ ಜಿಲೆಟಿನ್ ಸ್ಫೋಟ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಹಾಗೂ ಘಟನೆಯಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡುವಂತೆ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರಿನ ವಕೀಲ ವಿಜಯ್ ಕುಮಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಸ್ಫೋಟದಲ್ಲಿ ಮೃತಪಟ್ಟ 5 ಮಂದಿ ಕುಟುಂಬಕ್ಕೂ ಸರಕಾರ ತಲಾ 5 ಲಕ್ಷ ರೂ. ಪರಿಹಾರ ನೀಡಿದೆ. ಪ್ರಕರಣದ ತನಿಖೆ ಪೂರ್ಣಗೊಳಿಸಿ ಆರೋಪಿತರಾದ ಸುಧಾಕರ್, ನರಸಿಂಹ ಮತ್ತು ಅವಿನಾಶ್ ವಿರುದ್ಧ ಸ್ಥಳೀಯ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಲಾಗಿದೆ. ಶಿವಮೊಗ್ಗ ಮತ್ತು ಸುತ್ತಲಿನ ಪ್ರದೇಶದಲ್ಲಿ ಅಕ್ರಮ ಕ್ವಾರಿಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ವಿವರಿಸಿದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ಪ್ರಕರಣ ಸಂಬಂಧ ಸರಕಾರ ಕ್ರಮ ಕೈಗೊಂಡಿರುವುದರಿಂದ ಅರ್ಜಿ ವಿಚಾರಣೆ ಮುಂದುವರಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿ ಇತ್ಯರ್ಥಪಡಿಸಿತು.
ಪ್ರಕರಣವೇನು: 2021ರ ಜ.22ರಂದು ಶಿವಮೊಗ್ಗ ಜಿಲ್ಲೆಯ ಹುಣಸೋಡು ಬಳಿಯ ಅಕ್ರಮ ಕಲ್ಲುಕ್ವಾರಿ ಸಮೀಪ ಲಾರಿಯಲ್ಲಿ ತುಂಬಿಸಿಟ್ಟಿದ್ದ ಜಿಲೆಟಿನ್ ಸ್ಫೋಟಗೊಂಡು ಐವರು ಕಾರ್ಮಿಕರು ಮೃತಪಟ್ಟಿದ್ದರು. ಪ್ರಕರಣ ರಾಜ್ಯಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದ ಅರ್ಜಿದಾರರು, ರಾಜಕೀಯ ನಾಯಕರ ಕುಮ್ಮಕ್ಕಿನಿಂದಲೇ ಅಕ್ರಮ ಕಲ್ಲುಕ್ವಾರಿಗಳು ನಡೆಯುತ್ತಿವೆ. ಇದನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಜಿಲ್ಲಾಡಳಿತಗಳು ವಿಫಲವಾಗಿವೆ. ಹೀಗಾಗಿ, ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಮೃತರ ಕುಟುಂಬಗಳಿಗೆ ಪರಿಹಾರ ನೀಡಲು ಸರಕಾರಕ್ಕೆ ಆದೇಶಿಸಬೇಕು ಎಂದು ಕೋರಿದ್ದರು.







