ಪುತ್ತೂರು; ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಆರೆಸ್ಸೆಸ್ ಮುಖಂಡ ನಾರಾಯಣ ರೈಗೆ ಜಾಮೀನು

ನಾರಾಯಣ ರೈ
ಪುತ್ತೂರು: ಕೆಲ ದಿನಗಳ ಹಿಂದೆ ಬಡಗನ್ನೂರು ಗ್ರಾಮದ ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾದ ಆರೋಪದಲ್ಲಿ ಪೊಕ್ಸೊ, ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿತನಾಗಿದ್ದ ಆರೆಸ್ಸೆಸ್, ಬಿಜೆಪಿ ಮುಖಂಡ ಕುದ್ಕಾಡಿ ನಾರಾಯಣ ರೈ ಎಂಬಾತನಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಶರತುಬದ್ಧ ಜಾಮೀನು ಮಂಜೂರುಗೊಳಿಸಿದೆ.
ತನ್ನ ಮನೆಯ ಕೆಲಸಕ್ಕೆ ಬರುತ್ತಿದ್ದ ದಲಿತ ಬಾಲಕಿಯನ್ನು ನಿರಂತರ ಅತ್ಯಾಚಾರವೆಸಗಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣ ಎಂದು ನಾರಾಯಣ ರೈ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಸಂತ್ರಸ್ತ ಬಾಲಕಿ ನ್ಯಾಯಾಧೀಶರ ಎದುರು ನೀಡಿದ್ದ ಹೇಳಿಕೆಯಾಧರಿಸಿ ಪೊಲೀಸರು ನಾರಾಯಣ ರೈ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಈ ನಡುವೆ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಸಹೋದರ ಸಂಬಂಧಿ ಯುವಕ ಸತೀಶ್ ಎಂಬವರನ್ನು ಪೊಲೀಸರು ಆರಂಭದಲ್ಲಿ ಬಂಧಿಸಿದ್ದರು. ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆದರೆ, ಪ್ರಕರಣದ ನೈಜ ಆರೋಪಿಯಾಗಿರುವ ನಾರಾಯಣ ರೈಯನ್ನು ಬಂಧಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳು ಸಂಪ್ಯ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿ, ಆರೋಪಿಯ ಬಂಧನಕ್ಕೆ ಗಡು ವಿಧಿಸಿ ಡಿವೈಎಸ್ಪಿ ಕಚೇರಿ ಮುತ್ತಿಗೆ ಎಚ್ಚರಿಕೆ ನೀಡಿದ್ದರು.
ಈ ನಡುವೆ, ದಲಿತ ದೌರ್ಜನ್ಯ ತಡೆ ಕಾಯ್ದೆಯಲ್ಲಿನ ಕಾನೂನು ತೊಡಕಿನಿಂದಾಗಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದ ಹಿನ್ನೆಲೆಯಲ್ಲಿ ಆರೋಪಿ ನಾರಾಯಣ ರೈ ನ್ಯಾಯಾಲಯಕ್ಕೆ ಶರಣಾಗಿದ್ದನು.
ನ್ಯಾಯಾಲಯಕ್ಕೆ ಶರಣಾದ ಆರೋಪಿ ನಾರಾಯಣ ರೈಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದರು. ಅದೇ ವೇಳೆಗೆ ಆತನ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಪೊಲೀಸ್ ಕಸ್ಟಡಿ ಅವಧಿಯಲ್ಲಿಯೇ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ನಡುವೆ ನಾರಾಯಣ ರೈ ಜಾಮೀನಿನಲ್ಲಿ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದ್ದರಿಂದಾಗಿ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಆರೋಪಿ ನಾರಾಯಣ ರೈ ಜಾಮೀನು ಅರ್ಜಿ ವಜಾಗೊಂಡಿರುವ ಬೆನ್ನಲ್ಲೇ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಜಾಮೀನು ಕೋರಿ ಎರಡನೇ ಬಾರಿ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಿರುವ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆರೋಪಿ ನಾರಾಯಣ ರೈಗೆ ಶರತ್ತು ಬದ್ಧ ಜಾಮೀನು ಮಂಜೂರುಗೊಳಿಸಿ ಆದೇಶಿಸಿದೆ. ಆರೋಪಿ ಪರ ವಕೀಲ ಮಹೇಶ್ ಕಜೆ ವಾದಿಸಿದ್ದರು.







