ಮಡಿಕೇರಿ;ವಿಧಾನ ಪರಿಷತ್ ಚುನಾವಣೆ: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಮಡಿಕೇರಿ ನ.23 : ಕೊಡಗು ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಮಂಗಳವಾರ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ, ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ ಹಾಗೂ ಜೆಡಿಎಸ್ ನ ಇಸಾಕ್ ಖಾನ್ ಅವರುಗಳು ನಾಮಪತ್ರ ಸಲ್ಲಿಸಿದರು.
ವೀರಾಜಪೇಟೆಯ ಶ್ರೀ ಗಣಪತಿ ದೇವಸ್ಥಾನ ಹಾಗೂ ನಗರದ ಚೌಡೇಶ್ವರಿ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ ಬಳಿಕ ಬೆಂಬಲಿಗರೊಂದಿಗೆ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಗ್ರಾ.ಪಂ., ಪಟ್ಟಣ ಪಂಚಾಯತ್ ಹಾಗೂ ನಗರಸಭೆಯ 1334 ಸದಸ್ಯರು ಮತದಾನದ ಹಕ್ಕು ಹೊಂದಿದ್ದು, ಈ ಪೈಕಿ 800ಕ್ಕೂ ಅಧಿಕ ಮಂದಿ ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ. ಕಳೆದ 34 ವರ್ಷಗಳಿಂದ ತಾನು ಸಾಮಾಜಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು, ಅಧಿಕಾರವಿಲ್ಲದಿದ್ದರೂ ಸಾಕಷ್ಟು ಮಂದಿಗೆ ಸಹಾಯ ಮಾಡಿರುವುದರಿಂದ ಈ ಚುನಾವಣೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ಜಯ ಗಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಸಂಸದ ಪ್ರತಾಪಸಿಂಹ, ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಪಕ್ಷದ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಹಾಜರಿದ್ದರು.









