ಪುತ್ತೂರು: ವಿದ್ಯಾರ್ಥಿಗೆ ಸಹ ವಿದ್ಯಾರ್ಥಿಗಳ ತಂಡದಿಂದ ಹಲ್ಲೆ

ಹಲ್ಲೆ ಖಂಡಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ
ಪುತ್ತೂರು: ಕಾಲೇಜ್ನಲ್ಲಿ ವಿದ್ಯಾರ್ಥಿಯೊಂದಿಗೆ ಮಾತನಾಡಿದ ಕಾರಣಕ್ಕೆ ವಿದ್ಯಾರ್ಥಿಯೋರ್ವನ ಮೇಲೆ ಹಲ್ಲೆ ನಡೆಸಿದ್ದಾರೆನ್ನಲಾದ ಪ್ರಕರಣವು ಪುತ್ತೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜೊಂದರಲ್ಲಿ ಮಂಗಳವಾರ ನಡೆದಿದೆ. ಘಟನೆಗೆ ಸಂಬಂಧಿಸಿ ಓರ್ವ ವಿದ್ಯಾರ್ಥಿ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಕಾಲೇಜ್ನಲ್ಲಿ ವಿದ್ಯಾರ್ಥಿನಿಯೊಬ್ಬರಲ್ಲಿ ಮಾತನಾಡಿದೆ ಎಂಬ ಕಾರಣದಿಂದ ಸುಮಾರು 15 ಮಂದಿ ವಿದ್ಯಾರ್ಥಿಗಳ ತಂಡವು ಕಾಲೇಜ್ನಲ್ಲಿ ತನ್ನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ವಿದ್ಯಾರ್ಥಿ ತಿಳಿಸಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ದಾಖಲಾಗಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳೂ ಪಿಯುಸಿ ಕಲಿಯುತ್ತಿದ್ದು ಅಪ್ರಾಪ್ತರು ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿಯಲ್ಲಿ ಮಾತನಾಡಿದ ವಿದ್ಯಾರ್ಥಿಗೆ ಹಲ್ಲೆ ನಡೆಸಿದ ತಂಡವು ಎಬಿವಿಪಿ ಕಾರ್ಯಕರ್ತರು ಎನ್ನಲಾಗಿದೆ.
ಕ್ಯಾಂಪಸ್ ಪ್ರಂಟ್ನಿಂದ ಪ್ರತಿಭಟನೆ
ವಿದ್ಯಾರ್ಥಿಯ ಮೇಲಿನ ಹಲ್ಲೆಯನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಸಂಜೆ ವೇಳೆಗೆ ಪುತ್ತೂರು ಬಸ್ಸು ನಿಲ್ದಾಣದ ಬಳಿಯಲ್ಲಿರುವ ಗಾಂಧೀಕಟ್ಟೆಯ ಮುಂಬಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಕೋಶಾಧಿಕಾರಿ ಸವಾದ್ ಕಲ್ಲರ್ಪೆ ಪ್ರತಿಭಟನೆಯಲ್ಲಿ ಮಾತನಾಡಿ, ಕಾಲೇಜ್ನಲ್ಲಿ ತನ್ನ ಸಹಪಾಠಿಯೊಂದಿಗೆ ಮಾತನಾಡಿದ ಎನ್ನುವ ಕ್ಷುಲ್ಲಕ ಕಾರಣವನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಯ ಮೇಲೆ ಎಬಿವಿಪಿ ಕಾರ್ಯಕರ್ತ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವುದು ಖಂಡನೀಯವಾಗಿದೆ. ಪುತ್ತೂರಿನಲ್ಲಿ ಕೋಮು ಗಲಭೆ ನಡೆಸಲು ಸಂಘ ಪರಿವಾರ ನಿರಂತರ ಪ್ರಯತ್ನ ನಡೆಸುತ್ತಿದ್ದು, ಪೊಲೀಸ್ ಇಲಾಖೆಯ ಜಾಣ ಮೌನವು ಇದಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ಮುಖಂಡ ರಿಯಾಝ್ ಅಂಕತಡ್ಕ, ಪುತ್ತೂರು ಜಿಲ್ಲಾ ಕಾರ್ಯದರ್ಶಿ ಮುಸ್ತಫಾ ಕೊಡಿಪ್ಪಾಡಿ, ಮುಖಂಡರಾದ ಫಾರೂಕ್ ಕಬಕ, ಸಮ್ಮಾಸ್ ಬನ್ನೂರು ಮತ್ತಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ದಿಡೀರ್ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು.







