ಸಂಬಿತ್ ಪಾತ್ರಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದಿಲ್ಲಿ ಪೊಲೀಸರಿಗೆ ನ್ಯಾಯಾಲಯ ನಿರ್ದೇಶನ
ಅರವಿಂದ್ ಕೇಜ್ರಿವಾಲ್ ತಿರುಚಿದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಪ್ರಕರಣ

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ತಿರುಚಿದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಪ್ರಕರಣದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸಂಬಿತ್ ಪಾತ್ರಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದಿಲ್ಲಿ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಿದೆ. ವೀಡಿಯೊದಲ್ಲಿ ಕೇಜ್ರಿವಾಲ್ ಅವರು ಕೃಷಿ ಕಾನೂನುಗಳ ಬಗ್ಗೆ ಮಾತನಾಡಿದ್ದಾರೆ.
ಭಾರತೀಯ ದಂಡ ಸಂಹಿತೆಯ(ಐಪಿಸಿ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಬಿಜೆಪಿ ವಕ್ತಾರ ಪಾತ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲು ತೀಸ್ ಹಝಾರಿ ಕೋರ್ಟ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಿಷಬ್ ಕಪೂರ್ ಆದೇಶಿಸಿದರು. ಕಪೂರ್ ಅವರು ಆಮ್ ಆದ್ಮಿ ಪಕ್ಷದ ಅತಿಶಿ ಅವರ ದೂರನ್ನು ಸ್ವೀಕರಿಸಿದರು.
ದೂರುದಾರ ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಸಮಾಜದ ಸದಸ್ಯರನ್ನು ಪ್ರಚೋದಿಸುವ ಏಕೈಕ ಉದ್ದೇಶದಿಂದ ವಂಚನೆಯಿಂದ ಹಾಗೂ ಉದ್ದೇಶಪೂರ್ವಕವಾಗಿ ಮೂಲ ವೀಡಿಯೊವನ್ನು ನಕಲಿಸಿದ್ದಾರೆ ಹಾಗೂ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು, ಕಪೋಲಕಲ್ಪಿತ ಮತ್ತು ತಿರುಚಿದ ವೀಡಿಯೊವನ್ನು ಅಪ್ಲೋಡ್ ಮಾಡಿದ್ದಾರೆ ಎಂದು ಅರ್ಜಿದಾರರನ್ನು ಪ್ರತಿನಿಧಿಸಿದ ವಕೀಲ ಮುಹಮ್ಮದ್ ಇರ್ಷಾದ್ ಹೇಳಿದರು.