ರಾಜ್ಯ ಕಾನೂನು ವಿವಿ ಪರೀಕ್ಷೆಗಳಿಗೆ ಸಮ್ಮತಿ ನೀಡಿದ ಹೈಕೋರ್ಟ್

ಬೆಂಗಳೂರು, ನ,24: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಗಳಿಗೆ ತಡೆಯಾಜ್ಞೆ ನೀಡಿದ್ದ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿರುವ ಹೈಕೋರ್ಟ್ ವಿಭಾಗೀಯ ಪೀಠ ಪರೀಕ್ಷೆ ನಡೆಸಲು ವಿವಿಗೆ ಅನುಮತಿ ನೀಡಿದೆ.
ಇದೇ ನವೆಂಬರ್ 15ರಿಂದ ಆರಂಭವಾಗಬೇಕಿದ್ದ ಪರೀಕ್ಷೆಗಳಿಗೆ ಹೈಕೋರ್ಟ್ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ಪರೀಕ್ಷೆಗಳನ್ನು ನಡೆಸಲು ವಿವಿಗೆ ಸಮ್ಮತಿಸಿ ಮಧ್ಯಂತರ ಆದೇಶ ಹೊರಡಿಸಿದೆ. ಹಾಗೆಯೇ, ನ್ಯಾಯಾಲಯದ ಅನುಮತಿ ಇಲ್ಲದೇ ಪರೀಕ್ಷಾ ಫಲಿತಾಂಶ ಪ್ರಕಟಿಸಬಾರದು ಎಂದು ನಿರ್ದೇಶಿಸಿದೆ.
ಪ್ರಕರಣದ ಹಿನ್ನೆಲೆ: ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ನಿರ್ದೇಶನದ ಪ್ರಕಾರ ಕೋವಿಡ್ ಸಂದರ್ಭದಲ್ಲಿ ತರಗತಿಗಳು ಸರಿಯಾಗಿ ನಡೆಯದ ಕಾರಣ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲ ವಿದ್ಯಾರ್ಥಿಗಳನ್ನು ಪಾಸು ಮಾಡಿ, ಮುಂದಿನ ತರಗತಿಗಳಿಗೆ ಭಡ್ತಿ ನೀಡುವಂತೆ ನಿರ್ದೇಶಿಸಿತ್ತು. ಹಾಗಿದ್ದೂ ವಿವಿ ಪರೀಕ್ಷೆಗಳನ್ನು ನಡೆಸಲು ಮುಂದಾಗಿರುವ ಕ್ರಮ ಸರಿಯಲ್ಲ ಎಂದು ಆಕ್ಷೇಪಿಸಿ ವಿದ್ಯಾರ್ಥಿ ನವೀನ್ ಹಾಗೂ ಇತರರರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ಪೀಠ ಪರೀಕ್ಷೆಗಳಿಗೆ ತಡೆಯಾಜ್ಞೆ ನೀಡಿತ್ತು.







