ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬಾಂಬ್ ಸ್ಫೋಟ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು, ನ.25: ರಾಜಧಾನಿಯ ಚಿನ್ನಸ್ವಾಮಿ ಸ್ಟೇಡಿಯಂ ಬಳಿ 2010ರಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಆರೋಪಿಗಳಿಗೆ ವಿಧಿಸಿದ್ದ 7 ವರ್ಷಗಳ ಶಿಕ್ಷೆಯನ್ನು ಪರಿಶೀಲಿಸಿರುವ ನಗರದ ವಿಶೇಷ ಕೋರ್ಟ್, ಇದೀಗ ಇಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಆರೋಪಿಗಳಾದ ಅಫ್ತಾಬ್ ಆಲಂ ಹಾಗೂ ಅಹಮ್ಮದ್ ಜಮಾಲ್‍ಗೆ ಜೀವಾವಧಿ ಶಿಕ್ಷೆ ವಿಧಿಸಿ ಗುರುವಾರ ಆದೇಶ ಹೊರಡಿಸಿದೆ.
ಇಬ್ಬರು ಆರೋಪಿಗಳನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು, ಕೋರ್ಟ್‍ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಅಫ್ತಾಬ್ ಆಲಂ ಹಾಗೂ ಅಹಮ್ಮದ್ ಜಮಾಲ್‍ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿದ್ದ ಸಿಸಿಬಿ ಪರ ವಕೀಲರು, ಕೃತ್ಯದ ಬಗ್ಗೆ ದಾಖಲಾಗಿರುವ ಪ್ರಕರಣಗಳನ್ನು ಆಧರಿಸಿ ಹೆಚ್ಚಿನ ಶಿಕ್ಷೆ ವಿಧಿಸಲು ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರಕರಣದ ಶಿಕ್ಷೆ ಪ್ರಮಾಣವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ನಿರ್ದೇಶನ ನೀಡಿತ್ತು. ಅದರನ್ವಯ ವಿಚಾರಣೆ ನಡೆಸಿದ ವಿಶೇಷ ಕೋರ್ಟ್, ಇಬ್ಬರೂ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.





