ಕಾಪು ಪುರಸಭೆಯಲ್ಲಿ ಪಕ್ಷದ ಗೆಲುವು ಎಲ್ಲಾ ಚುನಾವಣೆಗೆ ಪೂರಕ: ಸಚಿವ ಸುನೀಲ್ ಕುಮಾರ್

ಕಾಪು: ಮುಂಬರುವ ಕಾಪು ಪುರಸಭಾ ಚುನಾವಣೆಯಲ್ಲಿ ಸಿಗುವ ಗೆಲುವು ಮುಂದಿನ ಎಲ್ಲಾ ಚುನಾವಣೆಗಳಿಗೂ ಪೂರಕವಾಗಿರಲಿದೆ. ಆ ಮೂಲಕ ಉಡುಪಿ ಜಿಲ್ಲೆ ಬಿಜೆಪಿಯ ಭದ್ರಕೋಟೆ ಎನ್ನುವುದನ್ನು ಮತ್ತೆ ಸಾಬೀತು ಪಡಿಸಬೇಕಿದೆ ಎಂದು ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದರು.
ಅವರು ಶುಕ್ರವಾರ ಕಾಪು ಪುರಸಭೆಯ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೆಪಿ ಚುನಾವಣಾ ಕಛೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತವಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಅಭಿವೃದ್ಧಿ ಪರ ಯೋಜನೆಗಳೊಂದಿಗೆ ಸ್ಥಳೀಯ ಶಾಸಕರ ಅಭಿವೃದ್ಧಿ ಚಟುವಟಿಕೆಗಳನ್ನೂ ನೋಡಿಕೊಂಡು ಮತದಾರರು ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಕಾಪು ಪುರಸಭೆಯ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದ್ದು, ಎರಡು ದಿನದಲ್ಲಿ ಅಂತಿಮ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು. ಕಾರ್ಯಕರ್ತರೆಲ್ಲರೂ ಜೊತೆಗೂಡಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮ ವಹಿಸಬೇಕಿದೆ ಎಂದು ಕರೆ ನೀಡಿದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ಬಗರ ಯೋಜನಾ ಪ್ರಾ„ಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಬಿಜೆಪಿ ಪ್ರಭಾರಿ ಉದಯಕುಮಾರ್ ಶೆಟ್ಟಿ, ರಾಜ್ಯ ಕಾರ್ಯಕಾರಣಿ ಸದಸ್ಯ ಸುರೇಶ್ ಪಿ. ಶೆಟ್ಟಿ ಗುರ್ಮೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‍ಪಾಲ್ ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಪಕ್ಷದ ಮುಖಂಡರಾದ ಗಂಗಾಧರ ಸುವರ್ಣ, ಅನಿಲ್ ಶೆಟ್ಟಿ ಮಾಂಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.
ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅಲೆವೂರು ಸ್ವಾಗತಿಸಿದರು. ಕಾಪು ಪುರಸಭಾ ವ್ಯಾಪ್ತಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸಂದೀಪ್ ಶೆಟ್ಟಿ ವಂದಿಸಿದರು.







