ಬಿಜೆಪಿ ನಾಯಕಿಯಿಂದ ದೂರು: ಸಂಜಯ್ ರಾವತ್ ವಿರುದ್ಧ ದಿಲ್ಲಿಯಲ್ಲಿ ಪ್ರಕರಣ ದಾಖಲು

ಹೊಸದಿಲ್ಲಿ: ಶಿವಸೇನಾ ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರು ಟಿವಿ ಸಂದರ್ಶನವೊಂದರಲ್ಲಿ ತನ್ನ ವಿರುದ್ಧ ನಿಂದನಾತ್ಮಕ ಭಾಷೆ ಬಳಸಿ ಬೆದರಿಕೆ ಒಡ್ಡಿದ್ದಾರೆ ಎಂದು ಬಿಜೆಪಿ ನಾಯಕಿಯೊಬ್ಬರು ಆರೋಪಿಸಿದ ಬಳಿಕ ದಿಲ್ಲಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ರವಿವಾರ ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದೀಪ್ತಿ ರಾವತ್ ಭಾರದ್ವಾಜ್ ಅವರು ಡಿಸೆಂಬರ್ 9 ರಂದು ಮಂಡವಾಲಿ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡಿಸೆಂಬರ್ 9 ರಂದು ಮರಾಠಿ ಸುದ್ದಿ ವಾಹಿನಿಯೊಂದರಲ್ಲಿ ಪ್ರಸಾರವಾದ ಸಂದರ್ಶನವೊಂದರಲ್ಲಿ ರಾವತ್ ಅವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಆಘಾತಕಾರಿ ಹೇಳಿಕೆ ನೀಡಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.
"ಬಿಜೆಪಿ ರಾಜಕೀಯ ಕಾರ್ಯಕರ್ತರಿಗೆ ಜೀವ ಬೆದರಿಕೆ ಹಾಕಿದ್ದಾರೆ ಹಾಗೂ ನಿಂದನೀಯ ಭಾಷೆಯನ್ನೂ ಬಳಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ದೂರಿನ ಆಧಾರದ ಮೇಲೆ ರಾವತ್ ವಿರುದ್ಧ ಸೆಕ್ಷನ್ 500 (ಮಾನನಷ್ಟಕ್ಕಾಗಿ ಶಿಕ್ಷೆ) ಹಾಗೂ 509 (ಮಹಿಳೆಯರ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಪದ, ಸನ್ನೆ ನಡವಳಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದಿಲ್ಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.







