ರೈಲು ವಿಳಂಬ: ಸಹಾಯಕ ಎಂಜಿನಿಯರ್ ಪರೀಕ್ಷೆ ಬರೆಯಲು ಮತ್ತೊಮ್ಮೆ ಅವಕಾಶ; ಸಚಿವ ಜೆ.ಸಿ.ಮಾಧುಸ್ವಾಮಿ

ಬೆಳಗಾವಿ,ಡಿ. 14: ಕಲಬುರಗಿಯಲ್ಲಿಂದು ನಡೆದ ಸಹಾಯಕ ಎಂಜಿನಿಯರ್(ಎಇ) ಪರೀಕ್ಷೆಗೆ ರೈಲು ವಿಳಂಬದ ಹಿನ್ನೆಲೆಯಲ್ಲಿ ಗೈರು ಹಾಜರಾದ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಭರವಸೆ ನೀಡಿದ್ದಾರೆ.
ಮಂಗಳವಾರ ವಿಧಾನಸಭೆ ಶೂನ್ಯವೇಳೆಯಲ್ಲಿ ಜೆಡಿಎಸ್ ಸದಸ್ಯ ಕೆ.ಎಂ. ಶಿವಲಿಂಗೇಗೌಡ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ರೈಲು ವಿಳಂಬದಿಂದ ಮಂಗಳವಾರ ಬೆಳಗ್ಗೆ ನಡೆಯಬೇಕಿದ್ದ ಪರೀಕ್ಷೆಗೆ ಗೈರು ಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಪರೀಕ್ಷೆಗೆ ಅವಕಾಶ ನೀಡುವಂತೆ ಸರಕಾರ ಮುಖ್ಯ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಅಧ್ಯಕ್ಷ ಹಾಗೂ ಕಾರ್ಯದರ್ಶಿಗೆ ನಿರ್ದೇಶನ ನೀಡಲಾಗಿದೆ.
ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಶಿವಲಿಂಗೇಗೌಡ, ಹಾಸನ, ದಕ್ಷಿಣ ಕರ್ನಾಟಕದ ಅಭ್ಯರ್ಥಿಗಳನ್ನು ಕಲಬುರಗಿಯಲ್ಲಿ ಪರೀಕ್ಷೆ ಬರೆಯಲು ಹೊಸ ಮಾದರಿ ಮಾಡಿದ್ದಾರೆ. ಆದರೆ, ಪರೀಕ್ಷೆ ಬರೆಯಲು ಬರುತ್ತಿದ್ದ ಅಭ್ಯರ್ಥಿಗಳು ಪ್ರಯಾಣಿಸುತ್ತಿದ್ದ ರೈಲು ನಾಲ್ಕೈದು ಗಂಟೆ ತಡವಾಗಿದ್ದು, ನಿಗದಿತ ಸಮಯಕ್ಕೆ ತಲುಪಲು ಸಾಧ್ಯವಾಗಲಿಲ್ಲ. ಹೀಗಾಗಿ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಧ್ವನಿಗೂಡಿಸಿದ ಕಾಂಗ್ರೆಸ್ ಸದಸ್ಯ ಪ್ರಿಯಾಂಕ್ ಖರ್ಗೆ, ಡಾ. ರಂಗನಾಥ್, ಡಾ.ಅಜಯ್ ಧರ್ಮಸಿಂಗ್ ಸಹಿತ ಹಲವು ಸದಸ್ಯರು ಪರೀಕ್ಷೆಯನ್ನು ಮತ್ತೊಮ್ಮೆ ಬರೆಯಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಕಲಬುರ್ಗಿಯಲ್ಲಿ ಇಂದು ನಡೆಯಬೇಕಿರುವ KPWD ಪರೀಕ್ಷೆಗೆ ಹಾಜರಾಗಲು ದೂರದೂರುಗಳಿಂದ ಬರುತ್ತಿದ್ದ ವಿದ್ಯಾರ್ಥಿಗಳ ರೈಲು ಸುಮಾರು 5 ಗಂಟೆಗೂ ಹೆಚ್ಚು ಕಾಲ ವಿಳಂಬವಾಗಿದೆ.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) December 14, 2021
ಇದರಿಂದ ಸುಮಾರು 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಸಮಯಕ್ಕೆೆ ಇನ್ನೂ ತಲುಪಲು ಆಗಿಲ್ಲಾ.
ಕೂಡಲೇ ಸರ್ಕಾರ ಪರೀಕ್ಷೆಯನ್ನು ಮುಂದೂಡಲು ನಾನು ಆಗ್ರಹಿಸುತ್ತೇನೆ
1/2 pic.twitter.com/d6PFuCRaim







