ಉಡುಪಿ: ಆರು ಮಂದಿಗೆ ಕೋವಿಡ್ ಸೋಂಕು
ಉಡುಪಿ, ಡಿ.18: ಜಿಲ್ಲೆಯಲ್ಲಿ ಶನಿವಾರ ಒಟ್ಟು ಆರು ಮಂದಿ ಕೋವಿಡ್ಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ ನಾಲ್ವರು ರೋಗದಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 30 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ದಿನದಲ್ಲಿ ಪಾಸಿಟಿವ್ ಬಂದವರಲ್ಲಿ ತಲಾ ಮೂವರು ಪುರುಷರು ಹಾಗೂ ಮಹಿಳೆಯರಿದ್ದಾರೆ. ಇವರಲ್ಲಿ ನಾಲ್ವರು ಉಡುಪಿ ತಾಲೂಕಿನವರಾದರೆ ಉಳಿದಿಬ್ಬರು ಕುಂದಾಪುರದವರು. ಇವರಲ್ಲಿ ಮೂವರನ್ನು ಆಸ್ಪತ್ರೆ ಹಾಗೂ ಉಳಿದ ಮೂವರನ್ನು ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಹ ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ.
ಶುಕ್ರವಾರ ಸೋಂಕಿನಿಂದ ನಾಲ್ವರು ಗುಣಮುಖರಾಗುವ ಮೂಲಕ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,471ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 4444 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,978ಕ್ಕೇರಿದೆ.
4523 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 4,523 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 550 ಮಂದಿ ಮೊದಲ ಡೋಸ್ ಹಾಗೂ 3973 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್ಓ ಡಾ.ನಾಗಭೂಷಣ ಉಡುಪಿ ತಿಳಿಸಿದ್ದಾರೆ.
ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 330 ಮಂದಿ ಮೊದಲ ಡೋಸ್ ಹಾಗೂ 2615 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 220 ಮಂದಿ ಮೊದಲ ಡೋಸ್ ಹಾಗೂ 1353 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಇವರೊಂದಿಗೆ ನಾಲ್ವರು ಆರೋಗ್ಯ ಕಾರ್ಯಕರ್ತರು ಹಾಗೂ ಒಬ್ಬರು ಮುಂಚೂಣಿ ಕಾರ್ಯಕರ್ತರು ಸಹ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.