ವಿಟ್ಲ, ಕೋಟೆಕಾರ್ ಪಪಂ ಚುನಾವಣೆ; ಡಿ. 26ರಿಂದ ನಿಷೇಧಾಜ್ಞೆ ಜಾರಿ
ಮಂಗಳೂರು, ಡಿ.23: ವಿಟ್ಲ ಮತ್ತು ಕೋಟೆಕಾರು ಪಟ್ಟಣ ಪಂಚಾಯತ್ಗೆ ಡಿ.27ರಂದು ಚುನಾವಣೆ ನಡೆಯಲಿರುವುದರಿಂದ ಮುಕ್ತ, ನ್ಯಾಯ ಸಮ್ಮತ ಹಾಗೂ ನಿಷ್ಪಕ್ಷಪಾತ, ಶಾಂತಿಯುತ ಮತದಾನ ನಡೆಸುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ 1973ರ ಸೆ.144 ರನ್ವಯ ಡಿ.26ರ ರಾತ್ರಿ 9 ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಪಪಂ ವ್ಯಾಪ್ತಿಯ 40 ಮತದಾನ ಕೇಂದ್ರಗಳ ಸುತ್ತಮುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಆದೇಶಿಸಿದ್ದಾರೆ.
ಮತಗಟ್ಟೆ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ. ನಿಷೇಧಿತ 100 ಮೀಟರ್ ವ್ಯಾಪ್ತಿಯಲ್ಲಿ ಮತದಾರರು ಮತ್ತು ಸಾರ್ವಜನಿಕರು ಚುನಾವಣಾ ಪ್ರಚಾರ ಮಾಡುವುದನ್ನು ಹಾಗೂ ಮತದಾನಕ್ಕೆ ಭಾದಕವಾಗುವ ಯಾವುದೇ ಚಟುವಟಿಕೆಗಳನ್ನು ಕೂಡ ನಿಷೇಧಿಸಲಾಗಿದೆ.
ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಬಳಕೆಯನ್ನು ಹಾಗೂ ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.