ಕೃಷಿ ವಿವಿಗಳಲ್ಲಿ ಖಾಲಿ ಹುದ್ದೆ ಭರ್ತಿ: ಸಚಿವ ಬಿ.ಸಿ.ಪಾಟೀಲ್

ಬೆಳಗಾವಿ, ಡಿ.24: ಕರ್ನಾಟಕದ ನಾಲ್ಕು ಕೃಷಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರತಿಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಶುಕ್ರವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪ ವೇಳೆ ಸದಸ್ಯ ಎಸ್.ವಿ.ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ನಾಲ್ಕು ವಿಶ್ವವಿದ್ಯಾಲಯಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿ ಉಳಿದಿದ್ದು, ಈ ಪೈಕಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಒಟ್ಟು 1619ಗಳು ಮಂಜೂರಾಗಿದ್ದವು. ಅವುಗಳಲ್ಲಿ 1031 ಖಾಲಿ ಇವೆ.
ಅದೇ ರೀತಿ ಧಾರವಾಡ ಕೃಷಿ ವಿಜ್ಞಾನಗಳ ವಿವಿಯಲ್ಲಿ 1074 ಮಂಜೂರಾಗಿದ್ದು, 671 ಖಾಲಿ ಇವೆ. ರಾಯಚೂರಿನ ಕೃಷಿ ವಿಜ್ಞಾನಗಳ ವಿವಿಯಲ್ಲಿ 1017ಗಳು ಮಂಜೂರಾಗಿದ್ದು, 341 ಖಾಲಿ ಇವೆ. ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿದಲ್ಲಿ 592 ಗಳು ಮಂಜೂರಾಗಿದ್ದು, 403 ಖಾಲಿ ಇವೆ. ಒಟ್ಟು ಬೋಧಕ ಹುದ್ದೆಗಳಲ್ಲಿ 2033ರ ಹುದ್ದೆಗಳ ಪೈಕಿ ಬಹಳಷ್ಟು ಖಾಲಿ ಇವೆ.
ಅವುಗಳಿಗೆ ನೇಮಕಾತಿ ಮಾಡಿಕೊಳ್ಳಲು ಹಣಕಾಸು ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಅವರೊಂದಿಗೂ ಚರ್ಚಿಸಲಾಗಿದೆ. ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಪೈಕಿ ಶೇ.50ರಷ್ಟನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ವಿವರಿಸಿದರು.
ಇದೇ ವೇಳೆ ಸಭಾಪತಿ ಬಸವರಾಜ ಹೊರಟ್ಟಿ ಅವರು, ಸದಸ್ಯರು ಶೇ.60ರಷ್ಟು ಹುದ್ದೆಗಳನ್ನು ಖಾಲಿ ಇಟ್ಟುಕೊಂಡು ವಿಶ್ವವಿದ್ಯಾಲಯವನ್ನು ಹೇಗೆ ನಡೆಸಲಾಯಿತು ಎಂದು ಕೇಳಿದ್ದಾರೆ. ಅದಕ್ಕೆ ಉತ್ತರ ನೀಡಿ ಎಂದರು.
ಹೊರಗುತ್ತಿಗೆ ಮೇಲೆ ಬೋಧಕ ವೃಂದವನ್ನು ನೇಮಿಸಿಕೊಂಡು ಶೈಕ್ಷಣಿಕ ಚಟುವಟಿಕೆಗಳನ್ನು ನಿರ್ವಹಣೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.







