ಉಡುಪಿ: ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಕ್ರಮಕ್ಕೆ ಐಜಿಪಿ ಸೂಚನೆ

ಉಡುಪಿ, ಡಿ.27: ವಿದ್ಯಾರ್ಥಿಗಳು ಮತ್ತು ಪಾಲಕರನ್ನು ವಿಶ್ವಾಸಕ್ಕೆ ತೆಗೆದು ಕೊಂಡು ಕಾಲೇಜುಗಳು ತಮ್ಮ ವಿದ್ಯಾರ್ಥಿಗಳಿಗಾಗಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅಳವಡಿಸುವುದು ಅಗತ್ಯ ಎಂದು ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಹೇಳಿದ್ದಾರೆ.
ಮಣಿಪಾಲದಲ್ಲಿರುವ ಜಿಲ್ಲಾಪಂಚಾಯತು ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಪದವಿ ಕಾಲೇಜುಗಳ ಪ್ರಾಂಶುಪಾಲರ ಸಭೆಯಲ್ಲಿ ಅವರು ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಕೈಗೊಳ್ಳಬೇಕಾದ ಕ್ರಮಗ ಕುರಿತು ಮಾತನಾಡುತ್ತಿದ್ದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಕೂರ್ಮಾರಾವ್ ಮಾತನಾಡಿ, ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಕರ್ತವ್ಯ. ಇದಕ್ಕೆ ಸಾಮರ್ಯದ ವಾತಾವರಣ ಅಗತ್ಯ ಎಂದರು.
ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಎನ್. ಸಲಹೆ ಸೂಚನೆಗಳನ್ನು ನೀಡಿದರು.
ಎಲ್ಲಾ ಶಿಕ್ಷಣ ಸಂಸ್ಥೆಗಳು ಕೋವಿಡ್ ಸುರಕ್ಷತಾ ಕ್ರಮಕೈಗೊಳ್ಳುವುದು, ಸಿ.ಸಿ.ಕ್ಯಾಮರಾ ಅಳವಡಿಸುವುದು, ಪಾಲಕರ ಸಭೆಗಳನ್ನು ಆಗಾಗ ನಡೆಸುವುದು, ಕಾಲೇಜುಗಳಿಗೆ ಶಿಸ್ತು ಸಮಿತಿಗಳನ್ನು ರಚಿಸಿ ಆಗಾಗ ಸಭೆ ನಡೆಸುವುದು, ವಿದ್ಯಾರ್ಥಿಗಳಲ್ಲಿ ಜೀವನ ಕೌಶಲ್ಯ, ವೃತ್ತಿ ಮಾರ್ಗದರ್ಶನ, ಅಪರಾಧ ತಡೆ ಕುರಿತಾಗಿ ತರಬೇತಿ ನಡೆಸಲು ಸಭೆಯಲ್ಲಿ ನಿರ್ಣಯಿಸಯಿಲಾತು.
ಜಿಲ್ಲಾ ಲೀಡ್ ಕಾಲೇಜು ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಸಭೆಯಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರು ಭಾಗವಹಿಸಿದ್ದರು.







