ಉಡುಪಿ: 19 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ
![ಉಡುಪಿ: 19 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ ಉಡುಪಿ: 19 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ](https://www.varthabharati.in/sites/default/files/images/articles/2021/12/30/319540-1640871657.jpg)
ಉಡುಪಿ, ಡಿ.30: ಜಿಲ್ಲೆಯಲ್ಲಿ ಗುರುವಾರವೂ ಕೋವಿಡ್ ಸೋಂಕಿತರ ಸಂಖ್ಯೆ ಎರಡಂಕಿಯಲ್ಲಿದ್ದು, ಒಟ್ಟು 19 ಮಂದಿ ಕೋವಿಡ್-19ಕ್ಕೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ ಆರು ಮಂದಿ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆ ಯಲ್ಲಿರುವವರ ಸಂಖ್ಯೆ 93ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ದಿನದಲ್ಲಿ ಪಾಸಿಟಿವ್ ಬಂದ 19 ಮಂದಿಯಲ್ಲಿ 8 ಮಂದಿ ಪುರುಷರು ಹಾಗೂ 11 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 18 ಮಂದಿ ಉಡುಪಿ ತಾಲೂಕಿಗೆ ಸೇರಿದರೆ ಒಬ್ಬರು ಕುಂದಾಪುರದವರು. ಪಾಸಿಟಿವ್ ಬಂದ ಎಲ್ಲರನ್ನು ಅವರವರ ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇಂದು ಸಹ ಕೋವಿಡ್ಗೆ ಯಾರೂ ಬಲಿಯಾಗಿಲ್ಲ.
ಬುಧವಾರ ಆರು ಮಂದಿ ರೋಗದಿಂದ ಗುಣಮುಖರಾಗುವ ಮೂಲಕ ಕೊರೋನದಿಂದ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 76,516ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 5212 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 77,088ಕ್ಕೇರಿದೆ.
1564 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಗುರುವಾರ 1,564 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 292 ಮಂದಿ ಮೊದಲ ಡೋಸ್ ಹಾಗೂ 1272 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್ಓ ಡಾ.ಉಡುಪ ತಿಳಿಸಿದ್ದಾರೆ.
ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 159 ಮಂದಿ ಮೊದಲ ಡೋಸ್ ಹಾಗೂ 779 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 133 ಮಂದಿ ಮೊದಲ ಡೋಸ್ ಹಾಗೂ 492 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಒಬ್ಬ ಮುಂಚೂಣಿ ಕಾರ್ಯಕರ್ತ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.