ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ: ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು, ಜ.3: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ ಹಾಗೂ ನಗರದ 2ನೆ ಎಸಿಎಂಎಂ ಕೋರ್ಟ್ ಜಾರಿ ಮಾಡಿರುವ ಸಮನ್ಸ್ ರದ್ದುಪಡಿಸುವಂತೆ ಕೋರಿ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿತು. 2019ರ ಲೋಕಸಭಾ ಚುನಾವಣೆ ವೇಳೆ ತೇಜಸ್ವಿ ಸೂರ್ಯ ನಿಯಮಾವಳಿ ಉಲ್ಲಂಘಿಸಿ ಕರಪತ್ರ ಹಂಚಿಕೆ ಮಾಡಿದರೆಂಬ ಆರೋಪ ಕೇಳಿಬಂದಿತ್ತು.
ಈ ಹಿನ್ನೆಲೆಯಲ್ಲಿ ತೇಜಸ್ವಿ ಸೂರ್ಯ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನಗರದ 2ನೆ ಎಸಿಎಂಎಂ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ತೇಜಸ್ವಿ ಸೂರ್ಯಗೆ ಇದೀಗ ರಿಲೀಫ್ ಸಿಕ್ಕಿದೆ.





