ಭಿಕ್ಷುಕರ ಪುನರ್ವಸತಿ ಕೇಂದ್ರದಲ್ಲಿ ಇರುವ ಮಾನಸಿಕ ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ನೀಡಿ: ಹೈಕೋರ್ಟ್

ಬೆಂಗಳೂರು, ಜ.5: ನಗರದ ಭಿಕ್ಷುಕರ ಪುನರ್ವಸತಿ ಕೇಂದ್ರದಲ್ಲಿ ಇರುವ ಮಾನಸಿಕ ಅಸ್ವಸ್ಥರಿಗೆ ಒಂದು ತಿಂಗಳ ಅವಧಿಯಲ್ಲಿ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಾನಸಿಕ ಪ್ರಾಧಿಕಾರದ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಹಾಗೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.
ಅರ್ಜಿದಾರರ ಪರ ವಾದಿಸಿದ ವಕೀಲರು, ನಗರದ ಭಿಕ್ಷುಕರ ಪುನರ್ವಸತಿ ಕೇಂದ್ರದಲ್ಲಿ ಇರುವ ಜನರಲ್ಲಿ ಶೇ.30ರಷ್ಟು ಭಿಕ್ಷುಕರು ಮಾನಸಿಕ ಅಸ್ವಸ್ಥರಾಗಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂದು ಪೀಠಕ್ಕೆ ತಿಳಿಸಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠ, ಭಿಕ್ಷುಕರ ಪುನರ್ವಸತಿ ಕೇಂದ್ರದಲ್ಲಿ ಇರುವ ಭಿಕ್ಷುಕರ ಜೀವನ ಗಣನೀಯವಾಗಿ ಸುಧಾರಣೆಯಾಗಿದೆ ಎಂಬ ಬಗ್ಗೆ ಮಾಹಿತಿ ಇದೆ. ಅಲ್ಲದೆ, ಮಾನಸಿಕ ಅಸ್ವಸ್ಥರಿಗೆ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಬೇಕೆಂದು ಸೂಚನೆ ನೀಡಿತು.







