ಉಡುಪಿ ಜಿಲ್ಲೆಯಲ್ಲಿ 92 ಮಂದಿ ಕೋವಿಡ್‌ಗೆ ಪಾಸಿಟಿವ್

ಉಡುಪಿ, ಜ.6: ಜಿಲ್ಲೆಯಲ್ಲಿ ಗುರುವಾರ 92 ಕೊರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ದಿನದಲ್ಲಿ 17 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 427ಕ್ಕೆ ನೆಗೆದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ದಿನದಲ್ಲಿ ಪಾಸಿಟಿವ್ ಬಂದ 92 ಮಂದಿಯಲ್ಲಿ 41 ಮಂದಿ ಪುರುಷರಾದರೆ 51 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 74 ಮಂದಿ ಉಡುಪಿ ತಾಲೂಕಿಗೆ ಸೇರಿದವರಾದರೆ 13 ಮಂದಿ ಕಾರ್ಕಳ ತಾಲೂಕಿನವರು. ಉಳಿದ ಐವರು ಕುಂದಾಪುರ ತಾಲೂಕಿಗೆ ಸೇರಿದರು. ಪಾಸಿಟಿವ್ ಬಂದ 92 ಮಂದಿಯಲ್ಲಿ ಒಬ್ಬರನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಿದ್ದು, ಉಳಿದ 91 ಮಂದಿಗೆ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಬುಧವಾರ 17 ಮಂದಿ ರೋಗದಿಂದ ಗುಣಮುಖರಾಗುವ ಮೂಲಕ ಕೊರೋನದಿಂದ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 76,594ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 4230 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 77,500ಕ್ಕೇರಿದೆ. ಇಂದು ಸಹ ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ.





