ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾಗಿ ಸುನೀಲ್ ಕುಮಾರ್ ನೇಮಕ

ಮಂಗಳೂರು, ಜ.24: ದ.ಕ.ಜಿಲ್ಲೆಯ ನೂತನ ಉಸ್ತುವಾರಿ ಸಚಿವರಾಗಿ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಆದೇಶ ಹೊರಡಿಸಿದ್ದಾರೆ.
ಕಾರ್ಕಳದ ಶಾಸಕರಾಗಿ ಮೂರು ಬಾರಿ ಆಯ್ಕೆಯಾಗಿರುವ ಸುನೀಲ್ ಕುಮಾರ್ ಅವರು ಬಸವರಾಜ್ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ಬಳಿಕ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಹೊಣೆ ಹೊತ್ತಿದ್ದ ಸುನೀಲ್ ಕುಮಾರ್‌ಗೆ ಇದೀಗ ದ.ಕ.ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನದ ಜವಾಬ್ದಾರಿ ನೀಡಲಾಗಿದೆ.
ರಾಜ್ಯ ಮೀನುಗಾರಿಕೆ ಮತ್ತು ಬಂದರು ಸಚಿವರಾಗಿರುವ ಎಸ್.ಅಂಗಾರ ಅವರಿಗೆ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನದ ಜವಾಬ್ದಾರಿ ನೀಡಲಾಗಿದೆ.
ದ.ಕ.ಜಿಲ್ಲಾ ಮೂಲದ ಅಂಗಾರರಿಗೆ ಉಡುಪಿ ಮತ್ತು ಉಡುಪಿ ಜಿಲ್ಲಾ ಮೂಲದ ಸುನೀಲ್ ಕುಮಾರ್‌ಗೆ ದ.ಕ.ಜಿಲ್ಲೆಯ ಜವಾಬ್ದಾರಿ ವಹಿಸಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಈ ಹಿಂದೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ನೀಡಲಾಗಿದೆ.







