ಪುನೀತ್ ರಾಜ್ ಕುಮಾರ್ ಗೆ ಸಿಗದ ಪದ್ಮ ಪ್ರಶಸ್ತಿ: ಮಾತು ತಪ್ಪಿದ ಸಿಎಂ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ಪದ್ಮ ಪ್ರಶಸ್ತಿ ಪಟ್ಟಿಯನ್ನು ಘೋಷಿಸಲಾಗಿದೆ, ಆದರೆ ನಟ ಪುನೀತ್ ರಾಜಕುಮಾರ್ ಅವರಿಗೆ ಪದ್ಮಶ್ರೀ ಪುರಸ್ಕಾರ ಸಿಗದಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಟ ಪುನೀತ್ ರಾಜಕುಮಾರ್ ಅವರ ಹೆಸರನ್ನು ಪದ್ಮ ಪ್ರಶಸ್ತಿಗೆ ಶಿಫಾರಸು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಆದರೆ ಪ್ರಶಸ್ತಿ ಪಟ್ಟಿಯಲ್ಲಿ ಅವರ ಹೆಸರಿಲ್ಲ ಎಂಬ ಪ್ರಶ್ನೆಗೆ, `ಪ್ರಧಾನಿ ಮೋದಿಗೆ ಯಾರು ಏನು ಶಿಫಾರಸ್ಸು ಮಾಡಿದ್ದರೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಪಾದಯಾತ್ರೆ ಸಂದರ್ಭದಲ್ಲಿ ಮುಖ್ಯಮಂತ್ರಿ ಯಾವ ಕಲಾವಿದರ ಜತೆ ಏನು ಮಾತನಾಡಿದ್ದರು ಎಂಬುದನ್ನು ಈ ಸಂದರ್ಭದಲ್ಲಿ ಹೇಳುವುದಿಲ್ಲ. ಆದರೆ, ಅವರು ಪುನೀತ್ ವಿಚಾರದಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. `ಪರಪ್ಪನ ಅಗ್ರಹಾರ ಜೈಲಲ್ಲಿ ವಿಶೇಷ ಸೌಲಭ್ಯ ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇದ್ದಾರೆ, ಅವರು ಏನು ಹೇಳುತ್ತಾರೋ ಕಾದು ನೋಡೋಣ' ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಶಿವಕುಮಾರ್ ತಿರುಗೇಟು ನೀಡಿದರು.





