ಕೇಂದ್ರದ ಬಜೆಟ್ ಠುಸ್ ಪಟಾಕಿ: ಬಡಗಲಪುರ ನಾಗೇಂದ್ರ

ಬೆಂಗಳೂರು, ಫೆ.1: ಪ್ರಸ್ತುತ ವಾರ್ಷಿಕ ಸಾಲಿನಲ್ಲಿ ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ಮದ್ದು ಇಲ್ಲದ ಠುಸ್ ಪಟಾಕಿ ಆಗಿದ್ದು, ಇದರಿಂದ ರೈತರಿಗೆ ಯಾವುದೇ ಲಾಭ, ಅನುಕೂಲವಾಗಿಲ್ಲ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಟೀಕಿಸಿದರು.
ಮಂಗಳವಾರ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಹಲವು ದಿನಗಳಿಂದ ರೈತರು ನಿರಂತರ ಪ್ರತಿಭಟನೆ ನಡೆಸಿದರು. ಬಳಿಕ ಕೇಂದ್ರ ಸರಕಾರವು ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆಯಿತು. ಆದರೆ, ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಬಿ) ನೀಡುವ ಕುರಿತು ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದರು.
ಕಳೆದ ಬಾರಿಗಿಂತಲೂ ಈಗ ಕನಿಷ್ಠ ಬೆಂಬಲ ಬೆಲೆ(ಎಂಎಸ್‍ಬಿ)ಗೆ ಮೀಸಲಿಟ್ಟಿದ್ದ ಹಣವನ್ನು ತಗ್ಗಿಸಲಾಗಿದೆ. ಇದು ರೈತರ ಸಮಸ್ಯೆಗಳಿಗೆ ಸ್ಪಂದಿಸದೆ ಕೇಂದ್ರ ಸರಕಾರವು ಹಿಂದೆ ಸರಿಯುವ ತಂತ್ರದ ಭಾಗವಾಗಿದೆ ಎಂದು ಆರೋಪಿಸಿದರು.
ಮತ್ತೊಂದೆಡೆ ಕೃಷಿಗೆ ಒಂದು ಮಾರುಕಟ್ಟೆ ವ್ಯವಸ್ಥೆ ಎಂದು ಹೇಳಲಾಗುತ್ತಿದೆ. ಆದರೆ, ಇಂತಹ ವ್ಯವಸ್ಥೆ ನಮ್ಮ ದೇಶಕ್ಕೆ ಅನ್ವಯ ಆಗುವುದಿಲ್ಲ. ಏಕೆಂದರೆ ಇಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಸಂತೆಗಳು, ಬೀದಿ ವ್ಯಾಪಾರಿಗಳಿದ್ದಾರೆ. ಹಾಗಾಗಿ, ಸ್ಥಳೀಯ ಮಾರುಕಟ್ಟೆಗೆ ಉತ್ತೇಜನ ನೀಡಬೇಕಾಗಿದೆ ಎಂದು ತಿಳಿಸಿದರು.
ನದಿ ಜೋಡಣೆ ಕಾರ್ಯಕ್ರಮವೂ ಬೊಳಗೆ ಮಾತಿನಂತೆ ಇದೆ. ಈ ಬಗ್ಗೆ ವ್ಯಾಪಕವಾಗಿ ಚರ್ಚೆ ನಡೆಯಬೇಕು ಎಂದ ಅವರು, ಮೇಕ್ ಇನ್ ಇಂಡಿಯಾ ಯೋಜನೆಗಳಿಗೆ ಉತ್ತೇಜನ ನೀಡುತ್ತಿಲ್ಲ. ಕೋವಿಡ್ ಸಂಕಷ್ಟದಿಂದ ಸಮಸ್ಯೆಗೆ ಸಿಲುಕಿರುವ ವ್ಯಾಪಾರ ವರ್ಗದ ಕೈ ಹಿಡಿಯುವ ಕೆಲಸವನ್ನು ಸರಕಾರ ಮಾಡಿಲ್ಲ ಎಂದು ಅವರು ಹೇಳಿದರು.