ಕೆಂಪೇಗೌಡ ಬಡಾವಣೆ ಕಾಮಗಾರಿ ಪ್ರಗತಿ ಪರಿಶೀಲನೆಗೆ ಏಜೆನ್ಸಿ ನೇಮಕ
ಬೆಂಗಳೂರು, ಫೆ.3: ನಿರ್ಮಾಣವಾಗುತ್ತಿರುವ ಕೆಂಪೇಗೌಡ ಬಡಾವಣೆಯ ಕಾಮಗಾರಿ ಪ್ರಗತಿ ಮತ್ತು ಗುಣಮಟ್ಟವನ್ನು ಪರಿಶೀಲಿಸಲು ಮೂರನೇ ಸಂಸ್ಥೆಯನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ.
ಕೆಂಪೇಗೌಡ ಬಡಾವಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಗುರುವಾರ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆಂಪೇಗೌಡ ಬಡಾವಣೆ ಗುತ್ತಿಗೆದಾರರು, ಇಂಜಿನಿಯರ್ ಗಳು ಮತ್ತು ನಿವೇಶನದಾರರ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಯಿತು.
ಬಡಾವಣೆ ನಿರ್ಮಾಣದಲ್ಲಿ ಆಗುತ್ತಿರುವ ವಿಳಂಬದಿಂದಾಗಿ ನಿರ್ಮಾಣ ವೆಚ್ಚ ಹೆಚ್ಚಾಗುತ್ತಿರುವ ಬಗ್ಗೆ ಸಭೆಯಲ್ಲಿ ಕಳವಳ ವ್ಯಕ್ತಪಡಿಸಿದ ಅಧ್ಯಕ್ಷರು, ಯಾವುದೇ ಕಾರಣಕ್ಕೂ ಇನ್ನು ಮುಂದೆ ನಿರ್ಮಾಣ ವೆಚ್ಚ ದುಬಾರಿಯಾಗಬಾರದು. ಕಾಮಗಾರಿಗಳು ತ್ವರಿತವಾಗಿ ಮುಗಿಯಬೇಕು ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ವೇಳೆ ಮಾತನಾಡಿದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ಯೋಜನೆ ವಿಳಂಬವಾಗಿರುವುದು ಮತ್ತು ನಿರ್ಮಾಣ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟತೆ ಪಡೆಯುವ ನಿಟ್ಟಿನಲ್ಲಿ ಗುಣಮಟ್ಟ ಮತ್ತು ಕಾಮಗಾರಿ ವಿಳಂಬದ ಬಗ್ಗೆ ಪರಿಶೀಲನೆ ನಡೆಸಲು ಸರಕಾರ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ವರದಿ ನೀಡಲು ಬ್ಯೂರೋ ವೆರಿಟಾಸ್ ಸಂಸ್ಥೆಯನ್ನು ನೇಮಕ ಮಾಡಲಾಗುತ್ತಿದೆ ಎಂದರು.
ಈ ಸಂಸ್ಥೆ ಆದಷ್ಟೂ ಶೀಘ್ರ ಪರಿಶೀಲನೆ ನಡೆಸಿ ಬಿಡಿಎಗೆ ವರದಿ ನೀಡಲಿದೆ. ವರದಿಯನ್ನು ಅಧ್ಯಯನ ನಡೆಸಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಆಯುಕ್ತ ರಾಜೇಶ್ ಗೌಡ, ಅಭಿಯಂತರ ಸದಸ್ಯ ಡಾ.ಶಾಂತರಾಜಣ್ಣ, ಆರ್ಥಿಕ ಸದಸ್ಯ ರಾಮಪ್ರಸಾದ್, ವಿಶೇಷ ಭೂಸ್ವಾಧೀನಾಧಿಕಾರಿ ಡಾ.ಸೌಜನ್ಯ ಮತ್ತು ಇತರರು ಇದ್ದರು.







