ಕಟ್ಟಡ ಕಾರ್ಮಿಕರ ಅವಲಂಬಿತರಿಗೆ ಸ್ವ ಉದ್ಯೋಗಕ್ಕೆ ನೆರವು ಯೋಜನೆ: ಸಚಿವ ಶಿವರಾಮ್ ಹೆಬ್ಬಾರ್
ಬೆಂಗಳೂರು, ಫೆ. 3: ಬಜೆಟ್‍ನಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಅವಲಂಬಿತರು ಸ್ವ ಉದ್ಯೋಗವನ್ನು ಕೈಗೊಳ್ಳುವ ದೃಷ್ಟಿಯಿಂದ ಹೊಲಿಗೆ ಯಂತ್ರ ನೀಡುವ ವಿನೂತನ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಈ ಯೋಜನೆಗೆ 15 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ.
ಗುರುವಾರ ನಗರದ ಯಶವಂತಪುರದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ 2022-23ನೆ ಸಾಲಿನ ಬಜೆಟ್ ಸಭೆಯನ್ನು ನಡೆಸಿದ ಅವರು, ಕಟ್ಟಡ ಕಾರ್ಮಿಕರಿಗೆ ತಾತ್ಕಾಲಿಕ ವಸತಿ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವ ಬಗ್ಗೆ ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ. ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಇದುವರೆಗೆ 28,94, 389 ಕಾರ್ಮಿಕರು ನೋಂದಣಿಯಾಗಿದ್ದಾರೆ. ಮಂಡಳಿಯಿಂದ ಕಾರ್ಮಿಕ ಕಲ್ಯಾಣಕ್ಕಾಗಿ ಒಟ್ಟು 19 ವಿವಿಧ ಯೋಜನೆಗಳನ್ನು ನೀಡಲಾಗುತ್ತಿದೆ. ಈ ಬಾರಿಯ ಆಯವ್ಯಯದಲ್ಲಿ ಫಲಾನುಭವಿಗಳ ಗುರಿಯನ್ನು ಹೆಚ್ಚಿಸಲಾಗುವುದು ಎಂದರು.
ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಶ್ರಮ ಸಾಮಥ್ರ್ಯ ಟೂಲ್ ಕಿಟ್‍ಗಳ ವಿತರಣೆ (ಮೆಸನ್ ಕಿಟ್) ಸದರಿ ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ.ಗಳಷ್ಟು ಮೊತ್ತವನ್ನು ಮೀಸಲಿಟ್ಟಿದ್ದು ಹಾಗೂ ಕಾರ್ಮಿಕರ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ 70 ಕೋಟಿ ರೂ.ಗಳಷ್ಟು ಮೊತ್ತವನ್ನು ಮೀಸಲಿಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಕಾರ್ಮಿಕರು ಕೆಲಸದ ನಿಮಿತ್ತ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆ ಹೋಗುತ್ತಿದ್ದು, ಸಾಮಾನ್ಯವಾಗಿ ಕೆಲಸದ ಸ್ಥಳದಲ್ಲಿಯೇ ವಾಸ ಮಾಡುವುದರಿಂದ ಅವರ ಮಕ್ಕಳ ಪಾಲನೆ ಮತ್ತು ಪೋಷಣೆ ಮಾಡುವ ಉದ್ದೇಶದಿಂದ ಕಟ್ಟಡ ಕಾರ್ಮಿಕರು ವಾಸಿಸುವ ಪ್ರದೇಶಗಳಲ್ಲಿ ಆರು ವರ್ಷದೊಳಗಿನ ಮಕ್ಕಳಿಗಾಗಿ ಶಿಶುಪಾಲನಾ ಕೇಂದ್ರ ತೆರೆಯುವುದಾಗಿದೆ. ಸದರಿ ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ 50 ಕೋಟಿ ರೂ.ಗಳಷ್ಟು ಮೊತ್ತವನ್ನು ಮೀಸಲಿಡಲಾಗಿದೆ ಎಂದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಗುರುಪ್ರಸಾದ, ಮಂಡಳಿಯ ಸದಸ್ಯರು, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.







