ಯುವ ವಿಜ್ಞಾನಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಫೆ. 3: ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ 9-12ನೆ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ವಿಧಾನದ ಮನವರಿಕೆ ಮಾಡುವ, ಅವರನ್ನು ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ಫೆ.9ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಯುವ ವಿಜ್ಞಾನ ಸ್ಪರ್ಧೆಯನ್ನು ಸಂಘಟಿಸುತ್ತಿದೆ.
ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸಿ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆಯುವ ವಿದ್ಯಾರ್ಥಿಗೆ 5ಸಾವಿರ ರೂ.ಹಾಗೂ ದ್ವಿತೀಯ ಬಹುಮಾನ ಪಡೆಯುವ ವಿದ್ಯಾರ್ಥಿಗೆ 3 ಸಾವಿರ ರೂ.ಗಳ ನಗದು ಬಹುಮಾನ ಹಾಗೂ ಅಭಿನಂದನಾ ಪತ್ರ ನೀಡಲಾಗುತ್ತದೆ.
ಜಿಲ್ಲಾ ಹಂತದಲ್ಲಿ ನಗದು ಬಹುಮಾನದೊಂದಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಯುವ ವಿಜ್ಞಾನಿಗಳ ಸಮಾವೇಶದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗುವ 4 ಯುವ ವಿಜ್ಞಾನಿಗಳಿಗೆ ತಲಾ 10 ಸಾವಿರ ರೂ.ಗಳ ನಗದು ಬಹುಮಾನದೊಂದಿಗೆ ಸ್ಮರಣಿಕೆ ಮತ್ತು ಯುವ ವಿಜ್ಞಾನಿ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಗುತ್ತದೆ.'
ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸ್ಪರ್ಧೆಯ ರಾಜ್ಯ ಸಂಯೋಜಕರಾದ ಮೀನಾಕ್ಷಿ ಶಿವಾನಂದ ಕುಡಸೋಮಣ್ಣವರ ಮೊಬೈಲ್ ಸಂಖ್ಯೆ: 900844 2557/94835 49159/ 94495 30245 ಅನ್ನು ಸಂಪರ್ಕಿಸಬಹುದಾಗಿದೆ ಎಮದು ಅಧಿಕೃತ ಪ್ರಕಟಣೆ ತಿಳಿಸಿದೆ.







