ಜಿ.ಪಂ., ತಾ.ಪಂ. ಚುನಾವಣೆ ಸದ್ಯಕ್ಕೆ ನಡೆಯುವುದು ಅನುಮಾನ: ಸಚಿವ ಕೆ.ಎಸ್.ಈಶ್ವರಪ್ಪ

ಬೆಂಗಳೂರು, ಫೆ. 11: ‘ನಗರಸಭೆ, ಪುರಸಭೆ, ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಪ್ರತ್ಯೇಕ ಮೀಸಲಾತಿ ನೀಡದಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ್ದು, ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸದ್ಯಕ್ಕೆ ನಡೆಯುವುದು ಕಷ್ಟಸಾಧ್ಯ' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಹಿಂದುಳಿದ ವರ್ಗಗಳ ಜನರು ಸಾಮಾನ್ಯ ವರ್ಗಕ್ಕೆ ಸೇರುತ್ತಾರೆಂದು ಸುಪ್ರೀಂಕೋರ್ಟ್ ಇತ್ತೀಚೆಗೆ ತಿಳಿಸಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಪ್ರತ್ಯೇಕ ಮೀಸಲಾತಿ ನೀಡಬೇಕಾದರೆ ಜನಸಂಖ್ಯೆ ಮತ್ತು ರಾಜಕೀಯ ಪ್ರಾತಿನಿಧ್ಯದ ಕುರಿತು ನಿಖರ ಅಂಕಿ-ಅಂಶಗಳು ಬೇಕು ಎಂದು ಕೋರ್ಟ್ ತಿಳಿಸಿದೆ. ಇದರಿಂದ ಚುನಾವಣೆ ನಡೆಸುವುದು ಅನುಮಾನ' ಎಂದು ನುಡಿದರು.
‘ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ರಾಜ್ಯ ಸರಕಾರ ಸಿದ್ಧತೆ ನಡೆಸಿತ್ತು. ಕ್ಷೇತ್ರ ಮರು ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮಿ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ಆಯೋಗವನ್ನೂ ರಚಿಸಲಾಗಿತ್ತು. ಆದರೆ, ಸುಪ್ರೀಂಕೋರ್ಟ್ ತೀರ್ಪಿನಿಂದ ಪ್ರಕ್ರಿಯೆ ಮುಂದುವರಿಸಲು ಸಾಧ್ಯವಾಗುತ್ತಿಲ್ಲ.
ಆದುದರಿಂದ ನಮ್ಮ ಸರಕಾರದ ಅವಧಿಯಲ್ಲಿ ಚುನಾವಣೆ ನಡೆಸುವುದು ಕಷ್ಟ. ಹಿಂದುಳಿದ ವರ್ಗಗಳಿಗೆ ಪ್ರತ್ಯೇಕ ಮೀಸಲಾತಿ ನೀಡದಂತೆ ಸುಪ್ರೀಂಕೋರ್ಟ್ ನೀಡಿರುವ ಸೂಚನೆ ಕುರಿತು ಪ್ರತಿಪಕ್ಷಗಳು ಚರ್ಚೆ ನಡೆಸಬೇಕು. ಕಾನೂನುಬದ್ಧವಾಗಿಯೇ ಚುನಾವಣೆ ನಡೆಯಬೇಕು. ಈ ಕುರಿತು ಕಾನೂನು ತಜ್ಞರ ಜತೆ ಚರ್ಚಿಸಿದ ಬಳಿಕ ಮುಂದುವರಿಯಬೇಕಿದೆ ಎಂದು ಈಶ್ವರಪ್ಪ ವಿವರಿಸಿದರು.
‘ರಾಷ್ಟ್ರ ಧ್ವಜದ ವಿಚಾರದಲ್ಲಿ ನಾನು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ. ಇದೀಗ ಎಲ್ಲವೂ ಶಾಂತವಾಗಿದೆ. ದಯವಿಟ್ಟು ಅದರ ಬಗ್ಗೆ ಮಾತನಾಡಬೇಡಿ. ಇನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನನ್ನ ಬಗ್ಗೆ ನೀಡಿರುವ ಹೇಳಿಕೆಗೂ ನಾನು ಮಾತನಾಡುವುದಿಲ್ಲ' ಎಂದು ಸಚಿವ ಈಶ್ವರಪ್ಪ ಇದೇ ಸಂದರ್ಭದಲ್ಲಿ ನಿರಾಕರಿಸಿದರು.







