ರಾಜ್ಯಾದ್ಯಂತ ಕಾಲೇಜುಗಳಿಗೆ ಫೆ.16ರ ವರೆಗೆ ರಜೆ ವಿಸ್ತರಣೆ: ಸಚಿವ ಅಶ್ವತ್ಥನಾರಾಯಣ
ಬೆಂಗಳೂರು: ಹಿಜಾಬ್ ಪ್ರಕರಣದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ಫೆ.16ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಶುಕ್ರವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ವಿಶ್ವವಿದ್ಯಾಲಯಗಳು, ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇದು ಅನ್ವಯಿಸುತ್ತದೆ. ಆದರೆ, ಈ ಅವಧಿಯಲ್ಲಿ ಆನ್ಲೈನ್ ಬೋಧನೆ ಎಂದಿನಂತೆಯೇ ನಡೆಯಲಿದೆ. ಜೊತೆಗೆ, ಈಗಾಗಲೇ ನಡೆಯುತ್ತಿರುವ ಮತ್ತು ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಪರಿಸ್ಥಿತಿಯನ್ನು ಅವಲೋಕಿಸಿ, ಕಾಲೇಜು ಪುನಾರಂಭದ ಬಗ್ಗೆ ಫೆ.16ರ ಹೊತ್ತಿಗೆ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.
Next Story