ಭಾವನಾತ್ಮಕ ವಿಚಾರ ಮುಂದಿಟ್ಟು ಜನರ ದಾರಿ ತಪ್ಪಿಸುತ್ತಿರುವ ಬಿಜೆಪಿ: ವಿನಯ ಕುಮಾರ್ ಸೊರಕೆ
ಪುತ್ತೂರು ನಗರ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಪುತ್ತೂರು: ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡದೆ ಕೇವಲ ಭಾವನಾತ್ಮಕ ವಿಚಾರವನ್ನು ಮುಂದಿಟ್ಟು ಜನರ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬುದ್ದಿವಂತರ ಜಿಲ್ಲೆಯಲ್ಲಿ ಶಿಕ್ಷಣಕ್ಕೇ ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.
ಅವರು ಶನಿವಾರ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯ ವತಿಯಿಂದ ಪಕ್ಷದ ಕಚೇರಿಯ ಮೇಲ್ಛಾವಣಿಯ ಸಭಾಂಗಣದಲ್ಲಿ ನಡೆದ ನಗರ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
ಕಾಂಗ್ರೆಸ್ ಆಡಳಿತದಲ್ಲಿ ದೇಶದಲ್ಲಿ ಬಡವರನ್ನು ಮಧ್ಯಮವರ್ಗದವರನ್ನಾಗಿ ಮಾಡಿತು, ಬಿಜೆಪಿ ಅಧಿಕಾರದಲ್ಲಿ ಮಧ್ಯಮ ವರ್ಗದವರು ಬಡವರಾದರು.
ದೇಶದಲ್ಲಿ 95 ಶೇ. ಜನರು ಬಡವರಾಗಿಯೇ ಇರಬೆಕೆಂಬುದು ಬಿಜೆಪಿಯ ಅಜೆಂಡಾಆಗಿದೆ. ಜನರ ನಡುವೆ ಧರ್ಮದ ಹೆಸರಲ್ಲಿ ಬೆಂಕಿ ಕೊಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಮಾಜಿ ಸಚಿವ ಯು.ಟಿ. ಖಾದರ್ ಮಾತನಾಡಿ ಬಿಜೆಪಿ ಮತ್ತು ಎಸ್‍ಡಿಪಿಐ ಎರಡೂ ಕೋಮುವಾದಿ ಪಕ್ಷಗಳಾಗಿದ್ದು, ಅವರು ಎಲ್ಲೆಡೆ ಶಾಂತಿ ಮತ್ತು ಸೌಹಾರ್ಧತೆಯನ್ನು ಕೆಡಿಸಿ ಅದರಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ರಾಜ್ಯದ ಸೌಹಾರ್ಧತೆಗೆ ಎರಡೂ ಪಕ್ಷಗಳು ಜಂಟಿಯಾಗಿ ಬೆಂಕಿ ಇಟ್ಟಿದೆ ಎಂದು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್‍ಕುಮಾರ್ ಮಾತನಾಡಿ ಮುಂಬರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಬೇಕಾಗಿದೆ. ಈ ನಿಟ್ಟಿನಲ್ಲಿ ಬೂತ್‍ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಈಗಿಂದೀಗಲೇ ಪ್ರಚಾರಕ್ಕೆ ಸಿದ್ದಪಡಿಸಬೇಕು. ರಾಜ್ಯ ಸರಕಾರದ ವೈಫಲ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಪುತ್ತೂರು ಬ್ಲಾಕ್ ಉಸ್ತುವಾರಿ ಟಿ ಪಿ ರಮೇಶ್ ಕೊಡಗು, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ್ ಮಾತನಾಡಿದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರಾದ ಚಿಕ್ಕಪ್ಪ ನಾೈಕ್ ಅರಿಯಡ್ಕ, ಜನಾರ್ಧನ ಬಂಗೇರ ಕೇಪುಳು ಮತ್ತು ಅಬ್ದುಲ್‍ರಹಿಮಾನ್ ಬನ್ನೂರು, ವಿಧಾನಪರಿತ್ ಸದಸ್ಯರಾಗಿ ಆಯ್ಕೆಯಾದ ಮಂಜುನಾಥ ಭಂಡಾರಿ, ಯುವ ಮುಖಂಡ ರಾದ ಶಿವರಾಮ ಆಳ್ವ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ಪ್ರಜಾಪ್ರತಿನಿಧಿ ಪುಸ್ತಕವನ್ನು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ನಗರ ಕಾಂಗ್ರೆಸ್‍ನ ವಿವಿಧ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ಪದಾಧಿಕಾರಿಗಳಿಗೆ ಪ್ರಮಾಣಪತ್ರ ಬೋಧಿಸಲಾಯಿತು.
ಈ ವೇಳೆ ಕೆದಂಬಾಡಿ ಹಾಗೂ ಮುಂಡೂರು ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜಾ, ಮಂಗಳೂರಿನ ಮಾಜಿ ಮೇಯರ್ ಮಹಾಬಲ ಮಾರ್ಲ, ಕಾಂಗ್ರೆಸ್ ಮುಖಂಡ ಎ ಸಿ ಜಯರಾಜ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಗಳಾದ ನ್ಯಾಯವಾದಿ ಫಝಲ್ ರಹೀಂ, ಮಹೇಶ್ ರೈ ಅಂಕೊತ್ತಿಮಾರ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಸಮಿತಿ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ, ಬ್ಲಾಕ್ ಪ್ರ. ಕಾರ್ಯದರ್ಶಿ ಅಮಲರಾಮಚಂದ್ರ, ರಾಜ್ಯ ಹಿಂದಳಿದ ಘಟಕದ ರಾಜ್ಯ ಕಾರ್ಯದರ್ಶಿ ಉಷಾ ಅಂಚನ್, ಪುತ್ತೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಕೂರ್ ಹಾಜಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಅರಸ್, ಹಿಂದುಳಿದ ಘಟಕದ ಹರೀಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.







