ಈಶ್ವರಪ್ಪ ವಜಾಕ್ಕೆ ನಿರ್ದೇಶನ ನೀಡಲು ಕೋರಿ ರಾಜ್ಯಪಾಲರಿಗೆ ದೂರು ನೀಡಲು ಕಾಂಗ್ರೆಸ್ ತೀರ್ಮಾನ

ಬೆಂಗಳೂರು, ಫೆ. 21: ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಪಾದಯಾತ್ರೆಯಲ್ಲಿ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ಪ್ರತಿಪಕ್ಷ ಕಾಂಗ್ರೆಸ್ ತೀರ್ಮಾನಿಸಿದೆ.
ನಾಳೆ(ಫೆ.22) ಸಂಜೆ 4 ಗಂಟೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರ ನಿಯೋಗ ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆಯಲ್ಲಿ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ತಿಳಿಸಿದೆ.
ಸದನದಲ್ಲಿ ಫೆ.17ರಿಂದ ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ರಾಜ್ಯ ಸರಕಾರ ಮಣಿಯುತ್ತಿಲ್ಲ. ಹೀಗಾಗಿ ರಾಜಭವನದ ಕದತಟ್ಟಲು ಪ್ರತಿಪಕ್ಷ ಕಾಂಗ್ರೆಸ್ ನಿರ್ಧರಿಸಿದ್ದು, ಆ ಮೂಲಕ ಈಶ್ವರಪ್ಪ ರಾಜೀನಾಮೆಗೆ ಒತ್ತಡ ಹೇರಲು ಮುಂದಾಗಿದೆ. ನಾಳೆ ನಡೆಯಲಿರುವ ಪಾದಯಾತ್ರೆಯಲ್ಲಿ ಪಕ್ಷದ ಎಲ್ಲ ಶಾಸಕರು, ಮೇಲ್ಮನೆ ಸದಸ್ಯರು, ಪದಾಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ.





