ಶಿವಮೊಗ್ಗದಲ್ಲಿ ಸಮಾಜಘಾತುಕರ ಬೆಳವಣಿಗೆಯಲ್ಲಿ ಪೊಲೀಸರ ಪಾತ್ರದ ಬಗ್ಗೆ ತನಿಖೆಗೆ ಗೃಹಸಚಿವರು ನಿರ್ದೇಶನ
ಹರ್ಷ ಕೊಲೆ ಆರೋಪಿಗಳು ಪೊಲೀಸ್ ಕಸ್ಟಡಿಗೆ

ಬೆಂಗಳೂರು, ಫೆ.23: ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಸಮಾಜಘಾತುಕ ಶಕ್ತಿಗಳ ಬೆಳವಣಿಗೆಯಲ್ಲಿ ಪೊಲೀಸರ ಪಾತ್ರದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಈ ಬಗ್ಗೆ ತನಿಖೆ ನಡೆಸಿ, ಒಂದು ವಾರದಲ್ಲಿ ವಿಸ್ತೃತವಾದ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಆರಕ್ಷಕ ಮಹಾ ನಿರೀಕ್ಷಕರಿಗೆ ಗೃಹಸಚವರು ನಿರ್ದೇಶಿಸಿದ್ದಾರೆ.
ಈ ಬಗ್ಗೆ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿರುವ ಗೃಹಸಚಿವರು, ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳ ವಿರುದ್ಧ ಶಿವಮೊಗ್ಗ ಜಿಲ್ಲೆಯ ದೊಡ್ಡಪೇಟೆ ಹಾಗೂ ಕೋಟೆ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ಇದೆ. ಕ್ರಿಮಿನಲ್ ಹಿನ್ನೆಲೆಯಳ್ಳ ಈ ಆರೋಪಿಗಳ ಮೇಲೆ ಈ ಎರಡೂ ಠಾಣೆಗಳಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ ತೆಗೆದುಕೊಂಡ ಕ್ರಮಗಳೇನು ಎಂಬುದನ್ನು ತನಿಖೆ ನಡೆಸಿ ಒಂದು ವಾರದೊಳಗೆ ವರದಿ ನೀಡುವಂತೆ ಸೂಚಿಸಿದ್ದಾರೆ.








