ರಾಜ್ಯ ಸರಕಾರ ನ್ಯಾಯಾಂಗ ನಿಂದನೆಗೆ ಗುರಿಯಾಗುತ್ತಿದೆ: ಪ್ರೊ. ಕೆ.ಎಸ್. ಭಗವಾನ್

ಬೆಂಗಳೂರು, ಫೆ.26: ರಾಜ್ಯ ಸರಕಾರವು ಮಸೂದೆಯೊಂದನ್ನು ಜಾರಿಗೆ ತಂದು 2011 ನೇ ಸಾಲಿನಲ್ಲಿ ಭ್ರಷ್ಟಾಚಾರ ನಡೆಸಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ರಾಜ್ಯ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‍ನ ಆದೇಶಗಳನ್ನು ಉಲ್ಲಂಘಿಸಿ, ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ. ಅಲ್ಲದೆ, 1998, 1999 ಹಾಗೂ 2004ರ ಕೆಎಎಸ್ ನೇಮಕಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶವನ್ನು ಇಂದಿನವರೆಗೂ ಜಾರಿಗೊಳಿಸಿಲ್ಲ. ಇದು ನ್ಯಾಯಾಂಗ ಉಲ್ಲಂಘನೆಯಾಗಿದೆ ಎಂದು ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಆರೋಪಿಸಿದ್ದಾರೆ.
ಶನಿವಾರ ಪ್ರೆಸ್‍ಕ್ಲಬ್‍ನಲ್ಲಿ ಮಾತನಾಡಿದ ಅವರು, ಕೆಪಿಎಸ್‍ಸಿ 2011ರಲ್ಲಿ 362 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿತ್ತು. ಅದರಂತೆ 2013ರ ಮಾರ್ಚ್ ಅಂತ್ಯಕ್ಕೆ ಲಿಖಿತ ಪರೀಕ್ಷೆಗಳ ಫಲಿತಾಂಶವನ್ನು ಹೊರಡಿಸಿದೆ. ಆದರೆ ನಂತರ ನಡೆಸಿದ ವ್ಯಕ್ತಿತ್ವ ಪರೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಸಿಐಡಿ ತನಿಖೆಯಲ್ಲಿ ಬಹಿರಂಗವಾಗಿದೆ. ಹಾಗಾಗಿ ಸರಕಾರ ಅಧಿಸೂಚನೆಯನ್ನು ಹಿಂಪಡೆಯಿತು.
ಆದರೆ, ಆಯ್ಕೆ ಪಟ್ಟಿಯಲ್ಲಿದ್ದ ಅಭ್ಯರ್ಥಿಗಳು ಸರಕಾರದ ನಡೆಯನ್ನು ಪ್ರಶ್ನಿಸಿ, ಕರ್ನಾಟಕ ಆಡಳಿತಾತ್ಮಕ ನ್ಯಾಯಧೀಕರಣದಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಕರಣವು ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿತು. ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯವು ಅಧಿಸೂಚನೆಯನ್ನು ರದ್ದುಪಡಿಸುವಂತೆ ತೀರ್ಪು ನೀಡಿತು. ಬಳಿಕ ಸುಪ್ರೀಂ ಕೋರ್ಟ್ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿಯಿತು. ಆದರೆ, ರಾಜ್ಯ ಸರಕಾರವು ಇದನ್ನು ಉಲ್ಲಂಘಿಸಿ ಅಕ್ರಮವಾಗಿ ನೇಮಕ ಮಾಡಿಕೊಳ್ಳಲು ಹವಣಿಸುತ್ತಿದೆ ಎಂದರು.
ಸರಕಾರ ತನ್ನ ನಿರ್ಧಾರವನ್ನು ಬದಲಿಸಿಕೊಂಡು ಮತ್ತೊಂದು ಅಧಿಸೂಚನೆಯನ್ನು ಹೊರಡಿಸಿ, 2011ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದು ಅವರು ರಾಜ್ಯಪಾಲರಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು.
1998, 1999, 2004ರ ಸಾಲಿನ ಗ್ರೂಪ್ ಎ ಮತ್ತು ಬಿ ವೃಂದದ ಪತ್ರಾಂಕಿತ ಅಧಿಕಾರಿಗಳು ನೇಮಕಾತಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಆದೇಶ ಪಾಲನೆಯಾಗಿಲ್ಲ, ಇದು ನ್ಯಾಯಾಂಗ ನಿಂದನೆಯಾಗಿದೆ ಎಂದರು.
ಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯಾಧ್ಯಕ್ಷ ಕೆ.ಎಸ್ ಶಿವರಾಮು, ಎ. ಲೋಕೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.







