ಮಾ.6ರಂದು ರಜತ ಸಂಭ್ರಮದ ರೈತ ಸಮಾವೇಶ
ಉಡುಪಿ, ಫೆ.28: ಉಡುಪಿ ಜಿಲ್ಲಾ ಕೃಷಿಕ ಸಂಘದ ಆಶ್ರಯದಲ್ಲಿ ಜಿಲ್ಲಾ ರೈತ ಸಮಾವೇಶವನ್ನು ಮಾ.6ರಂದು ಬೆಳಗ್ಗೆ 9:30ರಿಂದ ಸಂಜೆ 4 ಗಂಟೆಯ ವರೆಗೆ ಕುಂಜಿಬೆಟ್ಟು ಶಾರದಾ ಮಂಟಪ ಆವರಣದಲ್ಲಿ ಆಯೋಜಿಸಲಾಗಿದೆ.
ಸಮಾವೇಶವನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಲಿರು ವರು. ರಜತ ಸಂಭ್ರಮದ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಗತಿಪರ, ಸಂಘಟಕ, ಸಹಕಾರ ಮನೋಭಾವ ಮತ್ತು ವೈಜ್ಞಾನಿಕ ಕೃಷಿ ಮಾಡುತ್ತಿರುವ 25 ಮಂದಿ ಕೃಷಿಕರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಮಧ್ಯಾಹ್ನ ಒಂದು ಗಂಟೆಯಿಂದ ಕೃಷಿ ವಿಚಾರಗೋಷ್ಠಿಗಳು ಮತ್ತು ಎರಡು ಗಂಟೆಯಿಂದ ಎರಡನೇ ವಿಚಾರ ಗೋಷ್ಠಿಗಳು ನಡೆಯಲಿವೆ. ಮಧ್ಯಾಹ್ನ 3 ಗಂಟೆಗೆ ಸರಕಾರಿ ಇಲಾಖೆಗಳ ರೈತಪರ ಯೋಜನೆಗಳ ಕುರಿತು ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ಕಂದಾಯ ಇಲಾಖೆ ಮತ್ತು ವಿದ್ಯುತ್ ಇಲಾಖಾ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ. ಸಮಾವೇಶದಲ್ಲಿ ಕೃಷಿ ಸಂಬಂಧಿತ ವಸ್ತು, ಯಂತ್ರೋಪಕರಣಗಳು, ಪತ್ರಿಕೆಗಳ ಪ್ರದರ್ಶನ ಮತ್ತು ಮಾರಾಟ ಇದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಭಟ್ ಕುದಿ, ಉಪಾಧ್ಯಕ್ಷರಾದ ಶ್ರೀನಿವಾಸ್ ಬಲ್ಲಾಳ್, ದಿನೇಶ್ ಶೆಟ್ಟಿ, ಕಾರ್ಯದರ್ಶಿ ರವೀಂದ್ರ ಪೂಜಾರಿ, ಪಾಂಡುರಂಗ ನಾಯಕ್ ಉಪಸ್ಥಿತರಿದ್ದರು.







