ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಸಚಿವ ನಿತಿನ್ ಗಡ್ಕರಿಗೆ ಕೈ ಮುಗಿದು ವಿನಂತಿಸಿದ ನಳಿನ್ ಕುಮಾರ್

ಮಂಗಳೂರು : ಸುರತ್ಕಲ್ ಟೋಲ್ ಗೇಟ್ ವಿರುದ್ಧ ಅನೇಕ ಹೋರಾಟಗಳು ನಡೆಯುತ್ತಿವೆ, ಹೀಗಾಗಿ ದಯವಿಟ್ಟು ಆ ಟೋಲ್ ಗೇಟ್ ತೆಗೆಯಿರಿ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಸಂಸದ ನಳಿನ್ ಕುಮಾರ್ ಅವರು ಕೈ ಮುಗಿದು ಮನವಿ ಮಾಡಿಕೊಂಡಿದ್ದಾರೆ.
ದ.ಕ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಬಂಧಿಸಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಗಮಿಸಿದ ಕೇಂದ್ರ ಹೆದ್ದಾರಿ ಸಚಿವರು ಭಾಗವಹಿಸಿದ್ದ ಶಂಕುಸ್ಥಾಪನೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸುರತ್ಕಲ್ ಟೋಲ್ ಗೇಟ್ ಅನ್ನು ಹೆಜಮಾಡಿ ಜತೆ ವಿಲೀನಗೊಳಿಸಬೇಕು ಅಥವಾ ಅದನ್ನು ಸಂಪೂರ್ಣವಾಗಿ ತೆಗೆದು ಹಾಕಬೇಕು ಎಂದು ಕೇಂದ್ರ ಸಚಿವರಲ್ಲಿ ನಾನು ಈಗಾಗಲೇ ಮನವಿ ಮಾಡಿಕೊಂಡಿದ್ದೇನೆ ಎಂದ ಸಂಸದ ನಳಿನ್ ಈ ಟೋಲ್ ಬಗ್ಗೆ ಸಾಕಷ್ಟು ಪ್ರತಿಭಟನೆ ಆಗುತ್ತಿದೆ. ಇದರಿಂದ ಜನರಿಗೆ ಮುಕ್ತಿ ಕೊಡಿಸಬೇಕು ಎಂದು ಬೇಡಿಕೊಂಡರು.
ಸುರತ್ಕಲ್ ನಲ್ಲಿರುವ ಟೋಲ್ ಗೇಟ್ ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಆ ಟೋಲ್ ಗೇಟನ್ನು ತೆರವುಗೊಳಿಸಲು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಲ್ಲಿ ವಿನಂತಿ ಮಾಡುತ್ತಿದ್ದೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.