ಸಂಸದರು, ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ವಾಪಸ್: ಮಾಹಿತಿ ಕೇಳಿದ ಹೈಕೋರ್ಟ್

ಬೆಂಗಳೂರು, ಮಾ.7: ರಾಜ್ಯದ ಸಂಸದರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿರುವ ಕುರಿತು ಪೂರ್ಣ ಮಾಹಿತಿ ಒದಗಿಸುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿರುವ ಹಾಗೂ ಪ್ರಕರಣಗಳ ವಿಚಾರಣೆಯ ಮೇಲ್ವಿಚಾರಣೆ ವಹಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಸಮಾಜದಲ್ಲಿ ಸೌಹಾರ್ದತೆ ನೆಲೆಗೊಳಿಸುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ಹಿಂಪಡೆಯಲಾಗಿದೆ. ಅದರಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ಈ ಹಿಂದೆ ಹೈಕೋರ್ಟ್‍ಗೆ ಸರಕಾರ ಸಮಜಾಯಿಷಿ ನೀಡಿತ್ತು. ಕಳೆದ 7 ವರ್ಷಗಳಲ್ಲಿ ರಾಜ್ಯಾದ್ಯಂತ ಕ್ರಿಮಿನಲ್ ಕೋರ್ಟ್‍ನಲ್ಲಿ ವಿಚಾರಣಾ ಹಂತದಲ್ಲಿದ್ದ ಜನಪ್ರತಿನಿಧಿಗಳ ವಿರುದ್ಧದ ಒಟ್ಟು 570 ಪ್ರಕರಣವನ್ನು ಸರಕಾರ ಹಿಂಪಡೆದಿತ್ತು.





