ಬುಧವಾರದಿಂದ ಎಂದಿನಂತೆ ತರಗತಿ; ಮಾ. 21ರವರೆಗೆ ನಿಷೇಧಾಜ್ಞೆ ಮುಂದುವರಿಕೆ
ಉಡುಪಿ : ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳ ಸಮವಸ್ತ್ರಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಛ ನ್ಯಾಯಾಲಯ ಇಂದು (ಮಾ.15) ನೀಡಿರುವ ಆದೇಶವನ್ನು ಎಲ್ಲರೂ ಗೌರವಿಸುವಂತೆ ಹಾಗೂ ಅದನ್ನು ತಪ್ಪದೇ ಪಾಲಿಸುವಂತೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಮನವಿ ಮಾಡಿದ್ದಾರೆ.
ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ಕಲಂ 144ರಂತೆ ಈಗಾಗಲೇ ವಿಧಿಸಲಾಗಿರುವ ನಿಷೇಧಾಜ್ಞೆ ಮಾ.21ರ ಸಂಜೆ 6 ಗಂಟೆಯವರೆಗೆ ಮುಂದುವರಿಯಲಿದ್ದು, ಈ ಅವಧಿಯಲ್ಲಿ ಯಾವುದೇ ಸಂಭ್ರಮಾಚರಣೆ, ಸಾರ್ವಜನಿಕ ಸಭೆ, ಪ್ರತಿಭಟನೆ, ಮೆರವಣಿಗೆ/ವಿಜಯೋತ್ಸವ ವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದ್ದು, ಆದರೆ ನಾಳೆಯಿಂದ ಎಂದಿನಂತೆ ಶಾಲಾ ಕಾಲೇಜುಗಳ ತರಗತಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು, ಸಂಘಸಂಸ್ಥೆಗಳು, ವಿದ್ಯಾರ್ಥಿಗಳು ಎಲ್ಲರೂ ನ್ಯಾಯಾಲಯ ನೀಡಿರುವ ತೀರ್ಪನ್ನು ಗೌರವಿಸಿ, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಜಿಲ್ಲಾಡಳಿತ ದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.





